ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಹೆಚ್.ಡಿಕೆ. ನವದೆಹಲಿ,ಜೂನ್,19,2024 (..):ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದೇನೆ. ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು ಎಂದರು. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು ಕೋರಿರುವುದಾಗಿ ತಿಳಿಸಿದರು. ಹಾಗೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ಹಂಚಿಕೊಳ್ಳಲಾಯಿತು ಎಂದರು. : , ,