ಅಕ್ಟೋಬರ್ ಅಂತ್ಯದೊಳಗೆ ರಾಜ್ಯದ ಎಲ್ಲರಿಗೂ ಮೊದಲ ಡೋಸ್ ಕೋವಿಡ್ ಲಸಿಕೆ ಬೆಂಗಳೂರು, ಸೆಪ್ಟೆಂಬರ್ 19, 2021 (..):ಅಕ್ಟೋಬರ್ ಅಂತ್ಯದೊಳಗೆ ಎಲ್ಲರಿಗೂ ಕೋವಿಡ್ ಮೊದಲನೆ ಡೋಸ್ ಲಸಿಕೆ ನೀಡುವ ಗುರಿ ಇದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರ ಜನ್ಮದಿನದಂದು ನಡೆದ ಮಹಾ ಲಸಿಕಾ ಅಭಿಯಾನದಲ್ಲಿ ರಾಜ್ಯದಲ್ಲಿ 31.60 ಲಕ್ಷ ಮಂದಿಗೆ ಲಸಿಕೆ ನೀಡಿ ದಾಖಲೆ ನಿರ್ಮಿಸಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ. 10 ಲಕ್ಷ ಜನಸಂಖ್ಯೆಗೆ ಹೋಲಿಸಿದರೆ ದೇಶದಲ್ಲೇ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ನಮ್ಮದಾಗಿದೆ. ಡಿ.15ರೊಳಗೆ ಎರಡು ಡೋಸ್ ಲಸಿಕೆಯನ್ನು ಎಲ್ಲರಿಗೂ ನೀಡುವ ಗುರಿ ಇದ್ದು, ವರ್ಷಾಂತ್ಯದೊಳಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗೆ ಲಸಿಕೆ ಕಂಡುಹಿಡಿಯುವ ಸಂಶೋಧನೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಲಸಿಕೆ ಕೊಡುವ ಸಾಧ್ಯತೆಗಳಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೂ ಆದ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. :