ಬಸವೇಶ್ವರ ಪ್ರತಿಮೆ ನಿರ್ಮಾಣ ಮತ್ತು ಜಿ.ಪಂ ಮತ್ತು ತಾ.ಪಂ ಚುನಾವಣೆ ಸೇರಿ ಹಲವು ವಿಚಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ. ಬೆಂಗಳೂರು,ಜುಲೈ,15,2021(..):ಡಿಸೆಂಬರ್ ವರೆಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್‌ವರೆಗೂ ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ ಸಂಪುಟ ಬಂದಿದೆ. ಆದರೆ ಸಹಕಾರ ಇಲಾಖೆಯಿಂದ ಪ್ರಸ್ತಾಪಿತವಾದ ಸಹಕಾರ ಸಂಘ ಹಾಗೂ ಬ್ಯಾಂಕ್‌ ಚುನಾವಣೆಗೆ ಗ್ರೀನ್‌ ಸಿಗ್ನಲ್ ನೀಡಲಾಗಿದೆ. ಅಲ್ಲಿನ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಚುನಾವಣೆಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು. ನೈಟ್ ಕರ್ಫ್ಯೂ ತೆರವು ಮತ್ತು ಅನ್ ಲಾಕ್ ೪.೦ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಭೆ ಮುಗಿಸಿ ಹೊರ ಬಂದ ನಂತರ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಈ ಕೆಳಕಂಡಂತಿವೆ. ವಿಧಾನಸೌಧದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಅನುಮೋದನೆ ನೀಡಲಾಗಿದ್ದು, ವಚನ ಬರೆಯುತ್ತಿರುವ ಮಾದರಿಯ ಪ್ರತಿಮೆ ಸ್ಥಾಪನೆಗೆ ಚರ್ಚಿಸಲಾಗಿದೆ. ಇನ್ನು ಮುಂದೆ ಯಾವುದೇ ಸುಗ್ರೀವಾಜ್ಞೆ ತರುವ ಬದಲು ಸದನದಲ್ಲಿ ಮಸೂದೆ ತರಲು ಸಭೆಯಲ್ಲಿ ತೀರ್ಮಾನಿಸಲಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವುದು, ಮೊಬೈಲ್ ಆಪ್ ಮೂಲಕ ಬೆಳೆ ಸರ್ವೆ, ಇನ್ವೆಸ್ಟ್ ಕರ್ನಾಟದ ಆಯೋಜನೆ, ರಾಜ್ಯದಲ್ಲಿ ಆಮ್ಲಜನಕದ ತಯಾರಿಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಯೋಜನೆಗಳಿಗೆ ಅನುಮತಿ ನೀಡಲಾಯಿತು. ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ತೆರೆಯಲು ಮೊದಲ ಹಂತದಲ್ಲಿ 15ಕೋಟಿ ರೂ . ಮೊಬೈಲ್ ಆಪ್ ಮೂಲಕ ಬೆಳೆ ಸರ್ವೆ ನಡೆಸಲು 48 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇನ್ವೆಸ್ಟ್ ಕರ್ನಾಟಕ-2022ನ್ನು ಫೆಬ್ರವರಿ 9, 10 ಮತ್ತು 11ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಹಾಗೆಯೇ ರಾಜ್ಯದಲ್ಲಿ ಆಮ್ಲಜನಕ ತಯಾರಿಕೆಯನ್ನು ಹೆಚ್ಚಿಸಲು ಮತ್ತು ಅದನ್ನು ಸಂಗ್ರಹಿಸಲು ಇನ್ಸೆಂಟಿವ್ ಸ್ಕೀಮ್​ಗೆ ಸಭೆ ಒಪ್ಪಿಗೆ ನೀಡಿದೆ. ಹಾಗೆಯೇ 139 ಸನ್ನಡತೆ ಆಧಾರದ ಕೈದಿಗಳನ್ನು ಬಿಡುಗಡೆ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಲಾಯಿತು. : - - –