ಮಹಾಮಳೆಗೆ ನಲುಗಿರುವ ಜನತೆ, ಜಾನುವಾರುಗಳ ರಕ್ಷಣೆ ಮತ್ತು ಪರಿಹಾರ ಅನುಷ್ಠಾನಕ್ಕೆ ಕೂಡಲೇ ಮುಂದಾಗಿ-ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ… ಬೆಂಗಳೂರು,ಆ,6,2020(..): ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ. ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಸಲಹೆ ನೀಡಿದ್ದಾರೆ. ಹಾಗೆಯೇ ಮತ್ತೊಂದು ಟ್ವೀಟ್ ನಲ್ಲಿ ವಿಶೇಷ ಆರ್ಥಿಕ ನೆರವು ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿರುವ ಹೆಚ್.ಡಿ ಕುಮಾರಸ್ವಾಮಿ, ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದ್ದಾರೆ. ಹಾಗೆಯೇ ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ. ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. : –--- - -