ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ. ಚಿಕ್ಕಬಳ್ಳಾಪುರ, ಆಗಸ್ಟ್ 22,2023(..):ಚಿಕ್ಕಬಳ್ಳಾಪುರ ‌ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಬಿ.ಎನ್ ಬಚ್ಚೇಗೌಡ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ ಪಕ್ಷದಲ್ಲಿ 70 ವರ್ಷ ವಯಸ್ಸಿಗೆ ನಿವೃತ್ತಿಯಾಗಬೇಕು. ಈಗ ನನಗೆ 81 ವರ್ಷ ವಯಸ್ಸಾಗಿದೆ. ಅರ್ಥಪೂರ್ಣ ಸಮಾರಂಭವನ್ನೂ‌ ಆಚರಣೆ ಮಾಡಿಕೊಂಡಿದ್ದೇವೆ. ನನಗೆ ಪಕ್ಷದಲ್ಲಿ ಟಿಕೆಟ್ ಕೊಡುವುದಿಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹೀಗಾಗಿ ನಾನು ರಾಜಕೀಯ ನಿವೃತ್ತಿಯಾಗುತ್ತಿದ್ದೇನೆ ಎಂದರು. ಬಿಜೆಪಿಯಲ್ಲಿ ಒನ್ ಫ್ಯಾಮಿಲಿಗೆ ಒನ್ ಟಿಕೆಟ್ ಎಂದು ಘೋಷಣೆ ಮಾಡಿದ್ದಾರೆ. ತಂದೆ, ಮಗ, ಮೊಮ್ಮಗ, ಮೊಮ್ಮಗಳು ರಾಜಕಾರಣಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಚುನಾವಣಾ ರಾಜಕೀಯದಲ್ಲಿ ಇರದಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಇರುತ್ತೇನೆ ಎಂದು ಬಿಎನ್ ಬಚ್ಚೇಗೌಡ ತಿಳಿಸಿದ್ದಾರೆ. ರಾಜ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ. ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಬೆನ್ನಲ್ಲೆ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಬಿಎನ್ ಬಚ್ಚೇಗೌಡ, ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ನೀಡದ ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ. ರಾಜ್ಯ ಸರ್ಕಾರ ಹಣ ನೀಡುತ್ತೇವೆ ಎಂದರೂ ಅಕ್ಕಿ ನೀಡದಿರುವುದು ತಪ್ಪು. ನಾನು ರಾಜ್ಯದ ಸಂಸದನಾಗಿ ಹೇಳುತ್ತಿದ್ದೇನೆ, ಅಕ್ಕಿ ಕೊಡದಿರುವುದು ತಪ್ಪು. ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡದೆ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದರು. : -- - - -.