ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ತಮಿಳುನಾಡು. ನವದೆಹಲಿ, ಆಗಸ್ಟ್ 14,2023(..):ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಈ ಸಂಬಂಧ ಸುಪ್ರೀಂಕೋರ್ಟ್​ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ ಬೆಳೆ ಹಾನಿಯಾಗಿದೆ. ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಕಳೆದ ವಾರ ಆರೋಪಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು. ಇನ್ನು ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಹೇಳಿಕೊಳ್ಳುವಂಥ ಮಳೆಯಾಗಿಲ್ಲ. ಹೀಗಾಗಿ ತಮಿಳುನಾಡಿಗೆ ಹೆಚ್ಚು ನೀರು ಬಿಡುವುದು ಕಷ್ಟ ಎಂಬುದು ಕರ್ನಾಟಕದ ವಾದವಾಗಿದೆ. : –- – -