ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ: ನಟ ಸುದೀಪ್, ಜೆಪಿ ನಡ್ಡಾ ಸಾಥ್. ಹಾವೇರಿ,ಏಪ್ರಿಲ್,19,2023(..):ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಶಿಗ್ಗಾಂವಿ ಚೆನ್ನಮ್ಮ ಸರ್ಕಲ್ ನಿಂದ ರೋಡ್ ಶೋ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿ ನಂತರ ಬಹಿರಂಗ ಸಮಾವೇಶ ನಡೆಸಿ ನಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು. ನಟ ಕಿಚ್ಚ ಸುದೀಪ್ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ಶಿಗ್ಗಾಂವಿ ಕ್ಷೇತ್ರದ ಜನರ ಪ್ರೀತಿಗೆ ನಾನು ಸೋತಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಿದ್ದೇನೆ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆ. ನಾನು ಸಿಎಂ ಆಗಿ ವಿದ್ಯಾರ್ಥಿಗಳು, ರೈತರಿಗಾಗಿ ಯೋಜನೆ ಜಾರಿ ಮಾಡಿದ್ದೇನೆ ಎಂದು ಬಿಜೆಪಿ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಎಂ ಕ್ಷೇತ್ರ ಬದಲಾವಣೆ ಮಾಡುತ್ತಾರೆ ಅಂತಾ ಊಹಾಪೋಹ ಇತ್ತು. ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ. ನಾನು ತೀರುಕೊಂಡ ಮೇಲೆ ಶಿಗ್ಗಾಂವಿಯಲ್ಲೇ ಮಣ್ಣು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಟ ಕಿಚ್ಚ ಸುದೀಪ್ ಮಾತನಾಡಿ, ಶಿಗ್ಗಾಂವಿಯಲ್ಲಿ ಪ್ರಚಾರ ಆರಂಭಿಸಿದ್ದಕ್ಕೆ ಬಹಳ ಖುಷಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸಿಎಂ ಬೊಮ್ಮಾಯಿಯವರು ಕಡಿಮೆ ಅವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನನ್ನನ್ನು ಆಹ್ವಾನಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ನಾನು ಭಾರತೀಯನಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ಗೆದ್ದೇ ಗೆಲ್ಲುವೆ ಒಂದು ದಿನ, ಗೆಲ್ಲಲೇ ಬೇಕು ಒಳ್ಳೆಯತನ ಎಂದು ಹೇಳಿದರು. : - – - :