ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು,ಮೇ.೨೭-ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಚಂಡಮಾರುತದ ಪರಿಣಾಮದ ಸಾಧ್ಯತೆಯಿಂದಾಗಿ ಕೋಲ್ಕತ್ತಾ ಮತ್ತು ಹಿಮಾಚಲ ಪ್ರದೇಶಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಮೂರು ದಿನಗಳ ಕಾಲ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಪೂರ್ವ ಮುಂಗಾರು ಕಡಿಮೆಯಾಗಿದೆ.
ಜೂನ್ ೧ರ ನಂತರ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಕೇರಳ ಮತ್ತು ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಭವಿಷ್ಯ ನುಡಿದಿದೆ. ಮೇ ಅಂತ್ಯದವರೆಗೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ.
ಮೇ ೩೦ಕ್ಕೆ ಕೇರಳ ಹಾಗೂ ಮೇ ೩೧ಕ್ಕೆ ಕರ್ನಾಟಕಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.ಈ ಹಿಂದೆ ಜೂನ್ ೪ಕ್ಕೆ ಕೇರಳಕ್ಕೆ ಮುಂಗಾರು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿತ್ತು.
ರೆಮಲ್ ಚಂಡಮಾರುತವು ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳ ಮೇಲೆ ಹೆಚ್ಚು ಚಲಿಸಿದೆ. ಹೀಗಾಗಿ ಬೆಂಗಳೂರು, ದಕ್ಷಿಣ ಭಾರತ ಸೇರಿದಂತೆ ರಾಜ್ಯದ ಮೇಲೆ ಚಂಡಮಾರುತ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.