ರಾಜ್ಯದಲ್ಲಿ ಐದು ದಿನ ಮಳೆ
ಬೆಂಗಳೂರು,ಮೇ.೧೩-ಮುಂದಿನ ೫ ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ೧೩ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳುವಂತೆ ಸೂಚಿಸಲಾಗಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ. ಉತ್ತರ ಕರ್ನಾಟಕ- ಬೆಳಗಾವಿ, ಧಾರವಾಡ, ಹಾವೇರಿ. ದಕ್ಷಿಣ ಕರ್ನಾಟಕ – ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ೫ ದಿನಗಳಲ್ಲಿ ಚಂಡಮಾರುತ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆಯೂ ಧಾರಾಕಾರ ಮಳೆ ಸುರಿದಿದೆ. ಧಾರವಾಡದಲ್ಲಿ ೮ ಸೆಂ.ಮೀ, ದಕ್ಷಿಣ ಕನ್ನಡದಲ್ಲಿ ೬ ಸೆಂ.ಮೀ, ಬೆಳಗಾವಿ, ಚಿಕ್ಕಮಗಳೂರಿನಲ್ಲಿ ೫ ಸೆಂ.ಮೀ ಮಳೆಯಾಗಿದೆ.
ಇಂದಿನಿಂದ ೧೬ರವರೆಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.ಮೇ ೧೬ರವರೆಗೆ ಮಳೆಯಾಗಲಿದ್ದು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.