ಕಾಂಗ್ರೆಸ್‌ನಿಂದ ಹಿಂದೂ ಧರ್ಮದ ಆಸಕ್ತಿ ನಾಟಕ
ಬೆಂಗಳೂರು. ಸೆ.೨೩- ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ದಿಢೀರಾಗಿ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ ವಿಚಾರಾವಾಗಿ ಹಿಂದೂ ಧರ್ಮದ ಬಗ್ಗೆ ಆಸಕ್ತಿ ತೋರುವ ನಾಟಕವಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಗಂಗಾ ಆರತಿ ಮಾದರಿಯಲ್ಲಿ ಕಾವೇರಿಗೆ ಆರತಿ ಮಾಡುವ ಸಲುವಾಗಿ ಅಧ್ಯಯನ ಮಾಡಲು ಹರಿದ್ವಾರ ಮತ್ತು ಕಾಶಿ ಭೇಟಿಯ ವಿಚಾರವಾಗಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಬಂದಿರುವಾಗ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಏತಕ್ಕೆ? ಎಂದು ಪ್ರಶ್ನಿಸಿದ್ದಾರೆ.
ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು-ಮಸ್ತಿ ಮಾಡಲು ಹೋಗಿದ್ದಾ? ಎಂದು ವಾಗ್ದಾಳಿ ಮಾಡಿದ್ದಾರೆ.
“ಅಯೋಧ್ಯೆ ರಾಮಮಂದಿರದ ಉದ್ಘಾಟನೆ ವೇಳೆ ೩೦ ವರ್ಷ ಹಳೆ ಕೇಸುಗಳನ್ನು ರೀ ಓಪನ್ ಮಾಡಿ ಕರಸೇವಕರನ್ನ ಜೈಲಿಗೆ ಹಾಕಿದ್ದ ಈ ಕಾಂಗ್ರೆಸ್ ಸರ್ಕಾರ, ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ ಈ ಕಾಂಗ್ರೆಸ್ ಸರ್ಕಾರ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಯನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ತಿಪ್ಪೆ ಸಾರಿಸಿದ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ-ವಿಚಾರದ ಬಗ್ಗೆ, ಸಂಪ್ರದಾಯ-ಪರಂಪರೆ ಬಗ್ಗೆ ಎಲ್ಲಿಲ್ಲದ ಆಸಕ್ತಿ ತೋರುವ ನಾಟಕ ಮಾಡುತ್ತಿದೆ” ಎಂದು ಆರೋಪಿಸಿದರು.