ನಾಟಕ ಬಿಟ್ಟು ಕೆಲಸ ಮಾಡಿ;ಹೆಚ್.ಡಿ ಕುಮಾರಸ್ವಾಮಿ ತಿರುಗೇಟು
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಮಾ.೨೪:ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಮ್ಮ ದುಡ್ಡು ನಮ್ಮ ಹಣ ಎಂಬ ನಾಟಕವಾಡುವುದನ್ನು ಬಿಟ್ಟು ಸಮರ್ಪP ರೀತಿಯಲ್ಲಿ ಕೆಲಸ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬರ ಪರಿಹಾರ ಕಾಮಗಾರಿಗಳಿಗಾಗಿ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಗೆ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಹೃದಯ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಪೂರೈಸಿ ಇಂದು ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ೨೮ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ತಮಗೆ ಎಷ್ಟು ಸಾದ್ಯವೋ ಅಷ್ಟು ಪ್ರಚಾರ ಮಾಡುತ್ತೇವೆ. ತಾವು ಮಂಡ್ಯದಿಂದ ಸ್ಪರ್ಧೆ ಮಾಡುವ ಕುರಿತು ೨-೩ ದಿನಗಳಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ. ವೈದ್ಯರು ೩-೪ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ ಎಂದರು.
ತಮ್ಮ ಆರೋಗ್ಯದ ಬಗ್ಗೆ ನಾಡಿನ ಜನತೆ ದೇವರ ಬಳಿ ಶುಭಕೋರಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಹಾರೈಕೆಯಿಂದಾಗಿ ಭಗವಂತ ಕಾಪಾಡಿದ್ದಾನೆ. ಈ ಹಿಂದೆ ೨ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಾಗಿತ್ತು. ಈ ಶಸ್ತ್ರ ಚಿಕಿತ್ಸೆ ವೇಳೆ ಉಂಟಾಗಿದ್ದ ಲೋಪದೋಷಗಣಲ್ಲಿ ೩ನೇ ಬಾರಿ ಸರಿಪಡಿಸಿಕೊಳ್ಳಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳಿಂದ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.
ವೈದ್ಯಕೀಯ ರಂಗದಲ್ಲಿ ಅತ್ಯಾಧುನಿಕ ಸಲಕರಣೆಗಳು ಮತ್ತು ಚಿಕಿತ್ಸೆಗಳು ಲಭ್ಯವಿರುವುದರಿಂದ ತಮ್ಮ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿದೆ. ತಮಗೆ ಚಿಕಿತ್ಸೆ ನೀಡಿದ ವೈದ್ಯರು ಸಾಯಿಬಾಬಾ ಭsಕ್ತರಾಗಿದ್ದಾರೆ. ತಮಗೆ ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ಸಾಯಿಬಾಬಾ ಅವರಿಗೆ ಪೂಜೆ ಸಲ್ಲಿಸಿದ ಬಳಿಕ ತಮ್ಮ ಚಿಕಿತ್ಸೆ ಮಾಡಿದ್ದಾರೆ. ಇದರ ಜತೆಗೆ ಹಂಗೇರಿಯಿಂದ ಬಂದ ನುರಿತ ವೈದ್ಯರು ತಮಗೆ ಶಸ್ತ್ರ ಚಿಕಿತ್ಸೆ ಮಾಡಿ ಅಭಿಮಾನಿಗಳು, ಹಿತೈಷಿಗಳು ಮತ್ತು ದೇವರ ಅನುಗ್ರಹದಿಂದ ಎಲ್ಲವೂ ಸುಸೂತ್ರವಾಗಿ ನಡೆದಿದೆ ಎಂದರು.