ಲೋಕ ಸಮರದಲ್ಲಿ ಕೈಗೆ ೨೦ ಸ್ಥಾನ:ಸಿಎಂ ವಿಶ್ವಾಸ
(ಸಂಜೆವಾಣಿ ಪ್ರತಿನಿಧಿಯಿಂದ)
ಮೈಸೂರು,ಮಾ.೨೪:ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾಡಿನ ಜನತೆಗೆ ನೀಡಿದ್ದ ೫ ಗ್ಯಾರಂಟಿ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಹೀಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ೨೦ ಕ್ಷೇತ್ರಗಳಲ್ಲಿ ಗೆಲುವು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಅಥವಾ ನಾಳೆ ಬಾಕಿ ಉಳಿದಿರುವ ಕಾಂಗ್ರೆಸ್ ಪಟ್ಟಿಗಳನ್ನು ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಕಗ್ಗಂಟಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮೈಸೂರಿಗೆ ಭೇಟಿ ನೀಡಿರುವ ಅವರು ಮಂಡಕ್ಕಳ್ಳಿ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಲ್ಲ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ. ಆದ್ದರಿಂದ ಲೋಕಸಭಾ ಚುಣಾವಣೆಯಲ್ಲೂ ನಾಡಿನ ಜನತೆ ಕಾಂಗ್ರೆಸ್ ಪಕ್ಷ ಕ್ಕೆ ಆರ್ಶೀವಾದ ಮಾಡುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮತದಾರರು ಯಾರನ್ನು ಗೆಲ್ಲಿಸುತ್ತಾರೋ ಅವರಿಗೆ ಟಿಕೆಟ್ ನೀಡಲಾಗಿದೆ.
ಕುಟುಂಬ ರಾಜಕಾರಣ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ೫ ಗ್ಯಾರಂಟಿ ಯೋಜನೆಗಳಿಗೆ ಕಳೆದ ಬಾರಿ ೩೬ ಸಾವಿರ ಕೋಟಿ ರೂ. ನಿಗದಿ ಮಾಡಿದ್ದೆವು. ಈ ಬಾರಿ ೫೬ ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ನಾವು ಬಿಜೆಪಿಯವರ ರೀತಿ ಸುಳ್ಳು ಹೇಳುವುದಿಲ್ಲ. ಏನು ಹೇಳುತ್ತೇವೋ ಅದನ್ನು ಮಾಡುತ್ತೇವೆ. ಆದರೆ ಬಿಜೆಪಿ ಸುಳ್ಳಿನ ಭರವಸೆ ನೀಡುವುದು ಅಭ್ಯಾಸವಾಗಿದೆ. ಬಿಜೆಪಿಯವರು ೬೦೦ ಭರವಸೆಗಳನ್ನು ನೀಡಿದ್ದರು. ಶೇ.೧೦ರಷ್ಟು ಈಡೇರಿಸಲಿಲ್ಲ. ದೇಶದ ಜನರ ಬ್ಯಾಂಕ್ ಖಾತೆಗಳಿಗೆ ೧೫ ಲಕ್ಷ ರೂ. ಜಮೆಮಾಡುವುದಾಗಿ ಪ್ರಧಾನಿ ಹೇಳಿದ್ದರು. ೨ ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಅಚ್ಚೆ ದಿನ್ ಬರಲಿದೆ ಎಂದು ಹೇಳಿದ್ದರು.ಆದರೆ, ಇದ್ಯಾವುದೂ ಈಡೇರಿಸಲಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷ ಸಾಧನೆಗಳ ಮೇಲೆ ಅವಲಂಬಿತವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜನ ಕೈ ಹಿಡಿಯುವ ವಿಶ್ವಾಸವಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್, ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.