ದೇಶದ ಹಲವೆಡೆ ಸಾಧಾರಣ ಮಳೆ ನಿರೀಕ್ಷೆ
ನವದೆಹಲಿ,ಮಾ.೨೩-ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಇಂದಿನಿಂದ ನಾಳೆಯವರೆಗೆ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮಾರ್ಚ್ ೨೬ ರವರೆಗೆ ದೇಶದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ ೨೬ ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಲಘು ಮಳೆ ಮತ್ತು ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲು ಮತ್ತು ಆರ್ದ್ರ ವಾತಾವರಣದ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಯಲಸೀಮಾ, ಕೇರಳ, ಮಾಹೆ, ಸೌರಾಷ್ಟ್ರ ಮತ್ತು ಕಚ್‌ನಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮುಂದಿನ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಾರ್ಚ್ ೨೪ ರಂದು ಪಂಜಾಬ್ ಮತ್ತು ಹರಿಯಾಣದಲ್ಲಿ ವಿರಳ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ ೨೩-೨೪ ರಂದು ಜಮ್ಮು-ಕಾಶ್ಮೀರ, ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್ ಮುಜಾಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಗುಡುಗು, ಹಿಮಪಾತ ಮತ್ತು ಲಘು ಮಳೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸ್ಕೈಮೆಟ್ ಹವಾಮಾನದ ಪ್ರಕಾರ, ಮುಂದಿನ ೨೪ ಗಂಟೆಗಳಲ್ಲಿ, ಪಶ್ಚಿಮ ಹಿಮಾಲಯ ಪ್ರದೇಶ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತ ಸಾಧ್ಯ. ಈಶಾನ್ಯ ಭಾರತದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ ಲಘು ಮಳೆಯಾಗಬಹುದು.
ತಮಿಳುನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದರೆ, ದಕ್ಷಿಣ ತಮಿಳುನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.