ಒಂದು ದೇಶ ಒಂದು ಚುನಾವಣೆಗೆ ಕೇಂದ್ರ ಸಂಪುಟ ಅಸ್ತು
ನವದೆಹಲಿ, ಸೆ.18- ಒಂದು ದೇಶ ಒಂದು ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಂದಿನ ಸಂಸತ್ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ನಿರೀಕ್ಷೆಯಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿ ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಅವರಿಗೆ ವರದಿ ನೀಡಿತ್ತು.
191 ದಿನಗಳ ಸಮಯವನ್ನು ತೆಗೆದುಕೊಂಡು ಅಧ್ಯಯನ ನಡೆಸಿದ್ದ ಸಮಿತಿ 18,000 ಕ್ಕೂ ಅಧಿಕ ಪುಟಗಳ ವರದಿಯನ್ನು ತಯಾರಿಸಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆಯನ್ನು ಸಂಗ್ರಹಿಸಿತ್ತು.
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆ ಮೇಲೆ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಅವರು ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ್ದರು. ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಭಾರತದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತಿದೆ.