ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ
ಕೆಂಗೇರಿ, ಸೆ.೧೮- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‌ಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಸ್. ಟಿ. ಸೋಮಶೇಖರ್ ತಿಳಿಸಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ದೊಡ್ಡ ಬಿದರಕಲ್ಲು ವಾರ್ಡ್ ಅಂದ್ರಹಳ್ಳಿ,ಚಕ್ರ ನಗರದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ನಾಗರಿಕರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಜಲ ಮಂಡಳಿ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾವೇರಿ ಕುಡಿಯುವ ನೀರು ಐದನೇ ಹಂತದ ಸರಬರಾಜು ಯೋಜನೆ ಶೀಘ್ರ ಪೂರ್ಣಗೊಳ್ಳಲಿರುವ ಪರಿಣಾಮ ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ ಎಂದರು.
ದೊಡ್ಡ ಬಿದರಕಲ್ಲು ವಾರ್ಡ್ ಕಮಿಟಿ ಸದಸ್ಯ ಎಂ.ಮಂಜುನಾಥ ಮಾತನಾಡಿ ಶಾಸಕರಾದ ಎಸ್. ಟಿ. ಸೋಮಶೇಖರ್ ರವರು ಬಡಾವಣೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಿ ಕಾರ್ಯನಿರ್ವಹಿಸುತ್ತಿರುವ ಪರಿಣಾಮದಿಂದಾಗಿ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡು ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದರು. ವಾರ್ಡ್ ಅಧ್ಯಕ್ಷ ಲಿಖಿತ್ ಗೌಡ, ಕೇಶವಮೂರ್ತಿ ಮುಖಂಡರಾದ ಪ್ರಕಾಶ್, ನಾಗರಾಜ್, ಬಸವರಾಜು, ರವಿ, ಶ್ರೀನಿವಾಸ್, ಭಾಗ್ಯಮ್ಮ, ಮೇರಿ, ಶೀಲಾ, ಮಹಾಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.