ಮದ್ಯ‌ನೀತಿ ಅನುಷ್ಠಾನ ಪ್ರಕರಣ: ಕೊನೆಗೂ ಕೆಸಿಆರ್ ಪುತ್ರಿ ಕವಿತಾ ಬಂಧನ
ಹೈದರಾಬಾದ್, ಮಾ.15- ದೆಹಲಿ ಸರ್ಕಾರದ ಮಧ್ಯ ನೀತಿ ಅನುಷ್ಠಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ವಿಚಾರಣೆಗೆ ಒಳಪಟ್ಟಿದ್ದ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಇಂದು ಬಂಧಿಸಿದೆ.
ಹೈದರಾಬಾದ್ ನಿವಾಸದ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು ವಿಚಾರಣೆಯ ಬಳಿಕ ಅವರನ್ನು ಬಂಧಿಸಿದ್ದಾರೆ.
ದೆಹಲಿ ಮಧ್ಯ ನೀತಿ ಅನುಷ್ಠಾನ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಬಹಳ ಸುದ್ದಿ ಮಾಡಿದ್ದು ಈಗಾಗಲೇ ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಮನೀಶ್ ಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅಲ್ಲದೆ ಜಾರಿ ನಿರ್ದೇಶನಾಲಯದಿಂದ ಬಂಧನ ಕೊಳಗಾಗಿ ಜೈಲಿನಲ್ಲಿದ್ದಾರೆ.
ದೆಹಲಿ ಸರ್ಕಾರದ ಮೇಲೆ ಪ್ರಭಾವ ಬೀರಿ ತಮ್ಮ ಕಡೆಯವರಿಗೆ ಮಧ್ಯನೀತಿ ಅನುಷ್ಠಾನದಲ್ಲಿ ನೆರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳಿಂದ ಹಲವು ಬಾರಿ ಕೆ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು ಅಲ್ಲದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ಕಲೆ ಹಾಕಿದ್ದರು.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ನಡುವೆಯೇ ಕವಿತಾ ಅವರ ಬಂಧನ ರಾಷ್ಟ್ರ ರಾಜಕಾರಣದಲ್ಲಿ ಮತ್ತಷ್ಟು ತೀವ್ರ ಕುತೂಹಲ ಪಡೆದುಕೊಂಡಿದೆ