ರಾಜ್ಯದಲ್ಲಿ ತಾಪಮಾನ ಏರಿಕೆ
ಬೆಂಗಳೂರು,ಮಾ.೧೦-ರಾಜ್ಯದಲ್ಲಿ ತಾಪಮಾನ ಹೆಚ್ಚಾಗಿದೆ. ತಾಪಮಾನ ಗರಿಷ್ಠ ಮಟ್ಟಕ್ಕೆ ಏರಿದ್ದು, ಜನ ಬಿಸಿಲಿನ ಹೊಡೆತಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗಿದೆ.
ರಾಜ್ಯದಲ್ಲಿ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೆಚ್ಚಿನ ತಾಪಮಾನದಿಂದ ಜನರು ಬೇಸತ್ತಿದ್ದಾರೆ. ಮಾರ್ಚ್ ಅಂತ್ಯದವರೆಗೂ ಇದೇ ರೀತಿ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರ್ಗಿ ೩೯, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ೩೮ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಒಳ ಜಿಲ್ಲೆಗಳಲ್ಲಿ ೩೬ ರಿಂದ ೩೯ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ೩೪ ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. ತಾಪಮಾನ ಮತ್ತಷ್ಟು ಏರಲಿದೆ.
ಮಾರ್ಚ್ ಅಂತ್ಯದ ವೇಳೆಗೆ ೪೦ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಬೀದರ್, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಿಸಿಲಿನ ಜತೆಗೆ ನೀರಿಗೂ ಹಾಹಾಕಾರ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.
ರಾಜ್ಯಾದ್ಯಂತ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಲಿನಲ್ಲಿ ಬಿಸಿಲಿನ ತಾಪ ಇದ್ದರೆ ರಾತ್ರಿ ಬಿಸಿಗಾಳಿ ಬೀಸುತ್ತದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ೨ ರಿಂದ ೩ ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.