ಹೈಕಮಾಂಡ್‌ಗೆ ವೆಂಕಟರಮಣೇಗೌಡ ಕೃತಜ್ಞತೆ
(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಮಾ.೯: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಕಾಂಗ್ರೆಸ್ ವರಿಷ್ಠರಿಗೆ ನಾನು ಆಭಾರಿ ಎಂದು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹೇಳಿದ್ದಾರೆ
ಮಂಡ್ಯ ಜಿಲ್ಲಾ ವ್ಯಾಪ್ತಿಯ ೮ ವಿಧಾನಸಭಾ ಕ್ಷೇತ್ರದ ಶಾಸಕರು, ಎಲ್ಲ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರುಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಒಕ್ಕೊರಲಿನಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಲು ಕೆಪಿಸಿಸಿಗೆ ಶಿಫಾರಸು ಮಾಡಿದ್ದರು. ಹಾಗಾಗಿ ಇಂದು ನನ್ನನ್ನು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಇವರುಗಳಿಗೆ ಮತ್ತು ಮಂಡ್ಯ ಜಿಲ್ಲೆಯ ಜನತೆಗೆ ಕೃತಜ್ಞತೆಯನ್ನು ಹೇಳಬಯಸುತ್ತೇನೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಹೇಗೆ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈಹಿಡಿದರೋ, ಹಾಗೆಯೇ ಈಗ ಸಂಸತ್ ಚುನಾವಣೆಯಲ್ಲಿಯೂ ನನ್ನನ್ನು ಆಯ್ಕೆ ಮಾಡಲಿದ್ದಾರೆ ಎಂಬ ಭರವಸೆ ನನಗಿದೆ. ಇಂದು ವೆಂಕಟರಮಣೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ನನಗೆ ಶ್ರೀರಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ