ಬೋರ್ಡ್ ಪರೀಕ್ಷೆ ರದ್ದು
ಬೆಂಗಳೂರು,ಮಾ.೬- ರಾಜ್ಯ ಪಠ್ಯಕ್ರಮ ಇರುವ ಶಾಲೆಗಳಲ್ಲಿ ೫, ೮, ೯ ಹಾಗೂ ೧೧ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ೫, ೮, ೯ ಮತ್ತು ೧೧ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವುದಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದ್ದು, ಈ ತೀರ್ಪಿನಿಂದ ಬೋರ್ಡ್ ಪರೀಕ್ಷೆ ನಡಸುವ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ.
ರಾಜ್ಯ ಪಠ್ಯಕ್ರಮದ ಶಾಲೆಗಳ ೫, ೮, ೯ ಹಾಗೂ ೧೧ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಹೈಕೋರ್ಟ್ ರದ್ದು ಮಾಡಿದೆ
ಸರ್ಕಾರದ ನಿರ್ಧಾರ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಇಂದು ತೀರ್ಪು ನೀಡಿ ೫, ೮, ೯ ಮತ್ತು ೧೧ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ರದ್ದು ಮಾಡಿದೆ.
ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ ೯ ರಿಂದ ೧೧ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ ೨೦೨೩ರ ಅಕ್ಟೋಬರ್ ೬ ಮತ್ತು ೯ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ, ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.
ಸರ್ಕಾರದ ಆದೇಶ ಪ್ರಶ್ನಿಸಿದ್ದ ಅರ್ಜಿದಾರರ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ.
ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದರು,
ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಕೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ.
ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರಾದರೂ ಹೈಕೋರ್ಟ್ ಇದಕ್ಕೆ ಒಪ್ಪಿಲ್ಲ.
