ಅತಿಶಿ ದೆಹಲಿ ಸಿಎಂ
ನವದೆಹಲಿ,ಸೆ.೧೭-ಅಬಕಾರಿ ನೀತಿ ಅನುಷ್ಠಾನ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಉತ್ತರಾಧಿಕಾರಿಯನ್ನಾಗಿ ಸಚಿವೆ ಆತಿಶಿ ಅವರನ್ನು ಆಯ್ಕೆ ಮಾಡಿದ್ದಾರೆ.
ದೆಹಲಿ ಸರ್ಕಾರದಲ್ಲಿ ಏಕೈಕ ಮಹಿಳಾ ಸಚಿವೆಯಾಗಿರುವ ಆತಿಶಿ, ಕೇಜ್ರಿವಾಲ್ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಶಿಕ್ಷಣ, ಇಂಧನ, ಲೋಕೋಪಯೋಗಿ ಸೇರಿದಂತೆ ಪ್ರಬಲ ಖಾತೆಗಳನ್ನು ನಿರ್ವಹಿಸಿರುವ ಅತಿಶಿ ಅವರಿಗೆ ಈಗ ಮುಖ್ಯಮಂತ್ರಿ ಪಟ್ಟ ಒಲಿದಿದೆ.
ದೆಹಲಿಯ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಸಚಿವೆ ಆತಿಶಿ
ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದು ಆ ಪ್ರಸ್ತಾಪಕ್ಕೆ ಎಲ್ಲಾ ನಾಯಕರು ಸಮ್ಮತಿ ಸೂಚಿಸಿದ್ದಾರೆ. ಹೀಗಾಗಿ ನೂತನ ಶಾಸಕಾಂಗ ಪಕ್ಷದ ನಾಯಕಿಯಾಗಿ ಸಚಿವೆ ಆತಿಶಿ ಆಯ್ಕೆಯಾಗಿದ್ದಾರೆ.
ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿರಿಯ ನಾಯಕರೂ ಆಗಿರುವ ಸಚಿವೆ ಆತಿಶಿ ಅವರನ್ನು ನೂತನ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಸಚಿವರಾದ ಆತಿಶಿ, ಗೋಪಾಲ ರೈ, ಸೌರಬ್ ಭಾರದ್ವಜ್ ,ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಸೇರಿದಂತೆ ಹಲವರು ಮುಂಚೂಣಿಯಲ್ಲಿದ್ದರು. ಅಂತಿಮವಾಗಿ ಅಳೆದು ತೂಗಿ ಅತಿಶಿ ಅವರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನ ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ – ನವೆಂಬರ್ ಚುನಾವಣೆಗೆ ಒತ್ತಾಯ
ಎಎಪಿ ಹಿರಿಯ ನಾಯಕ ಗೋಪಾಲ್ ರೈ ಮಾತನಾಡಿ, ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಸಚಿವೆ ಆತಿಶಿ ಅವರನ್ನು ಆಯ್ಕೆ ಮಾಡಲು ಶಾಸಕಾಂಗ ಸಭೆ ಸರ್ವಾನುಮತದಿಂದ ನಿರ್ದಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ದೆಹಲಿ ವಿಧಾನಸಭೆಯ ಅವಧಿಯ ಮುಂದಿನ ಫೆಬ್ರವರಿ ತಿಂಗಳಲ್ಲಿ ನಡೆಯಲಿದ್ದು ಈ ವರ್ಷದ ಅಕ್ಟೋಬರ್ ಇಲ್ಲವೇ ನವಂಬರ್ ನಲ್ಲಿ ನಡೆಸುವಂತೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಭೆಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರವನ್ನು ಒತ್ರಾಯಿಸಿದ್ದಾರೆ ಎಂದರು.
ವಿಧಾನಸಭೆ ಚುನಾವಣೆ ನಡೆಯುವ ತನಕ ದೆಹಲಿ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಿಸಲ್ಲಿದ್ದಾರೆ ಎಂದು ತಿಳಿಸಿದರು.
ರಾಜ್ಯಪಾಲರ ಭೇಟಿ ಬಳಿಕ ಸಮಯ ನಿಗದಿ
ಅರವಿಂದ್ ಕೇಜ್ರಿವಾಲ್ ಸೇರಿದಂತೆ ಎಎಪಿಯ ಶಾಸಕರು ನೂತನ ಶಾಸಕಾಂಗ ಪಕ್ಷದ ನಾಯಕನ ಜೊತೆಗೂಡಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಯ ನಿಗದಿ ಮಾಡಲಿದ್ದಾರೆ.
ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನಡೆಸಿ ಅವಧಿಗೆ ಮುನ್ನವೇ ವಿಧಾನಸಭೆ ಚುನಾವಣೆ ನಡೆಸುವಂತೆ ಒತ್ತಾಯಿಸಿದ್ದರು.
ದೆಹಲಿಯ ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಕೇಜ್ರಿವಾಲ್ ಶಪಥ ಮಾಡಿದ್ದಾರೆ
ನೂತನ ಸಿಎಂ ಕೈಗೊಂಬೆ
ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಆಫೀಸಿಯವರು ಅರವಿಂದ್ ಕೇಜ್ರಿವಾಲ್ ಅವರ ಕೈಗೊಂಬೆಯಾಗಲಿದ್ದಾರೆ ಎಂದು ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಭವಿಷ್ಯ ನುಡಿದಿದ್ದಾರೆ.
ಸಚಿವೆ ಆತಿಶಿ ಅವರನ್ನು ಮುಖ್ಯಮಂತ್ರಿ ಮಾಡಿರುವ ಕ್ರಮಕ್ಕೆ ಎಎಪಿಯಲ್ಲಿ ಅಪಸ್ವರ ಹೇಳಲಿದೆ ಕಾದು ನೋಡಿ ಎಂದಿದ್ದಾರೆ.
ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್ ದೇವ್, ಅರವಿಂದ್ ಕೇಜ್ರಿವಾಲ್, ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಾಗದ ಕಾರಣ ಅನಿವಾರ್ಯವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆಯವರನ್ನು ಆಯ್ಕೆ ಮಾಡುವಂತಾಗಿದೆ ಎಂದಿದ್ದಾರೆ.
ಸಂಜೆ ಕೇಜ್ರಿವಾಲ್ ರಾಜೀನಾಮೆ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ೬ ತಿಂಗಳ ಕಾಲ ಜೈಲಿನಲ್ಲಿದ್ದು ಜಾಮೀನಿನ ಮೇಲೆ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ಸಂಜೆ ೪.೩೦ಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಹಿರಿಯ ನಾಯಕ ಗೋಪಾಲ್ ರೈ ತಿಳಿಸಿದ್ದಾರೆ
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಮೂಲಕ ಮತ್ತೊಂದು ಹೋರಾಟಕ್ಕೆ ಅರವಿಂದ್ ಕೇಜ್ರಿವಾಲ್ ಮುಂದಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದಂದೇ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ.