ರಾಜ್ಯದ ಹಲವೆಡೆ ಎರಡು ದಿನ ಮಳೆ
ಬೆಂಗಳೂರು ,ಸೆ.೨-ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ಭಾರೀಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕಲಬುರಗಿಯಲ್ಲಿ ಭಾರೀ ಮಳೆ ಅಬ್ಬರದಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು ರಜೆ ಘೋಷಿಸಿದೆ.ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಮಕ್ಕಳಿಗೆ ಶಾಲೆಗೆ ಬರಲು ತೊಂದರೆ ಆಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲಾದ್ಯಂತ ಎಲ್ಲ ಸರ್ಕಾರಿ, ಅನುದಾನಿ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.ಬೀದರ್ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಬೀದರ್ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಿದೆ.
ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಡಿಡಿಪಿಐ ಸಲೀಂಪಾಷಾ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು ಅಹಿತಕರ ಘಟನೆಗಳು ನಡೆಯದಂತೆ ಶಿಕ್ಷಣ ಇಲಾಖೆ ಮುನ್ನೇಚ್ಚರಿಕೆ ಕ್ರಮವನ್ನು ಕೈಗೊಂಡಿದೆ.