ಸಿಎಂ ಸದ್ಯಕ್ಕೆ ನಿರಾಳ: ಎಫ್ ಐಆರ್ ದಾಖಲಿಸಲು ಸಿಗದ ಅನುಮತಿ:ವಿಚಾರಣೆ ಆ.29ಕ್ಕೆ ಮುಂದೂಡಿಕೆ
ಬೆಂಗಳೂರು, ಆ.19– ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ‌ಅವರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. ಸದ್ಯಕ್ಕೆ ಯಾವುದೇ ಎಫ್‌ಐಆರ್‌ ದಾಖಲಿಸಕು ಅನುಮತಿ ಸಿಗದ ಕಾರಣ ಸಿಎಂ ಬಿಸೋ ದೊಣ್ಣೆಯಿಂದ ಪಾರಾಗಿದ್ದಾರೆ.
ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿಇಂದು ನಡೆಯಿತು. . ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರ ಮಧ್ಯಾಹ್ನ 2.30ಕ್ಕೆ ಮುಂದೂಡಿದರು.
ಅರ್ಜಿ ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ದೂರುದಾರರು ಹಾಗೂ ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಪಿಸಿ ಆಕ್ಟ್ 17ಎ ಅಡಿ ಅನುಮತಿ ಪ್ರಶ್ನಿಸಲಾಗಿದ್ದು, ರಿಟ್ ಅರ್ಜಿಯೊಂದಿಗೆ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ. ರಾಜ್ಯಪಾಲರು ವಿವೇಚನಾರಹಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ.
ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಪ್ರಭುಲಿಂಗ ನಾವದಗಿ ವಾದಿಸಿದರು. ಎಲ್ಲಾ ವಾದವನ್ನು ಕೋರ್ಟ್‌ ಆಲಿಸಿದ್ದು, ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಅಂದರೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ. ಗವರ್ನರ್ ಆದೇಶ ನೀಡುವ ಮುನ್ನ ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಆದರೆ, ಗವರ್ನರ್ ಯಾವ ಆಧಾರ ಇಲ್ಲದೆಯೂ ಅನುಮತಿ ನೀಡಿದ್ದಾರೆ ಎಂದು ಹೇಳಿದರು.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಸೇರಿ ಹಲವರ ವಿರುದ್ಧ ಅನುಮತಿ ಕೇಳಲಾಗಿದೆ.ಈ ವಿಚಾರಗಳು ಪ್ರಾಸಿಕ್ಯೂಷನ್ ಅನುಮತಿ ನೀಡಲು ಮುಖ್ಯವೇ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.
ಇದಕ್ಕೆ ಮನು ಸಿಂಘ್ವಿ ಉತ್ತರಿಸಿ, ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಗೆ ಉತ್ತರ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ಒಂದು ಆಯೋಗ ಸಹ ರಚನೆಯಾಗಿದೆ. ಆ ಕಮಿಟಿ ಈಗಾಗಲೇ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಕ್ಯಾಬಿನೆಟ್ ನಿರ್ಣಯದ ಉದ್ದೇಶ ಸಿಎಂ ಅನ್ನು ರಕ್ಷಿಸುವುದಾಗಿರಬಹುದು. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜ್ಯಪಾಲರಿಗೆ ಸ್ವತಂತ್ರ ಅಧಿಕಾರವಿದೆ ಎಂದು ತಿಳಿಸಿದರು.
ಇದೇ ವೇಳೆ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶಕ್ಕೆ ತಡೆ ನೀಡಬಾರದು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಭಿಷೇಕ್ ಸಿಂಘ್ವಿ ಮಧ್ಯೆ ಪ್ರವೇಶಿಸಿ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಕಾಯ್ಡಿರಿಸಿದೆ. ಆದೇಶ ನೀಡಿದರೆ ಸಮಸ್ಯೆ ಆಗಲಿದೆ ಎಂದರು.
ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ರಾಜ್ಯಪಾಲರ ಆದೇಶದ ಬಗ್ಗೆ ಸೆಷನ್ಸ್ ಕೋರ್ಟ್ ತೀರ್ಮಾನ ಮಾಡಲು ಸಾಧ್ಯವೇ? ಸಾಂವಿಧಾನಿಕ ವಿಚಾರವನ್ನು ಹೈಕೋರ್ಟ್ ತೀರ್ಮಾನ ಮಾಡಬೇಕು ಎಂದು ಹೇಳಿ ಬಳಿಕ ಅರ್ಜಿ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿದರು.