ರಾಜ್ಯಪಾಲರ ವಿರುದ್ಧ ಆಕ್ರೋಶ ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕಲಬುರಗಿ,ಆ.೧೯-ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.
ಜನಪರವಾದ ಆಡಳಿತ ನೀಡುತ್ತ ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಆಯಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಿದರು.
ಕಲಬುರಗಿ;ರಾಜ್ಯಪಾಲರ ನಡೆಯನ್ನು ಖಂಡಿಸಿ ಕಲಬುರಗಿಯಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿಪತ್ರ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಮೇಂiiರ್ ಯಲ್ಲಪ್ಪ ನಾಯ್ಕೋಡಿ, ಉಪ ಮೇಯರ್ ಹೀನಾ ಬೇಗಂ, ಕುಡಾ ಅಧ್ಯಕ್ಷ ಮಜರ್ ಆಲಂಖಾನ್, ಮುಖಂಡರಾದ ಸೋಮಶೇಖರ ಗೋನಾಯಕ್, ಸುಭಾಷ ರಾಠೋಡ್, ಫರಾಜುಲ್ ಇಸ್ಲಾಂ, ನೀಲಕಂಠರಾವ ಮೂಲಗೆ, ಲಿಂಗರಾಜ ತಾರಫೈಲ್, ನಂದಕುಮಾರ ಮಾಲಿಪಾಟೀಲ, ಸಂತೋಷ ಪಾಟೀಲ ದಣ್ಣೂರ, ಲಾಲ್ ಅಹ್ಮದ್ ಬಾಂಬೆ ಸೇಠ್, ವಹಾಜ್ ಬಾಬಾ ಜುನೈದಿ, ಸಂತೋಷ ಪಾಟೀಲ ದುಧನಿ, ಈರಣ್ಣ ಝಳಕಿ, ಶಿವಾನಂದ ಹೊನಗುಂಟಿ, ಸೈಯದ್ ಅಹಮದ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಿಜಯಪುರ: ಕರ್ನಾಟಕದ ರಾಜ್ಯಪಾಲರು ದುರುದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪಕ್ಷಪಾತಿಯಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು.
ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎo.ಬಿ. ಪಾಟೀಲ ನೇತೃತ್ವದಲ್ಲಿ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನೆ ಮೆರವಣಿಗೆ ಹೊರಟು ಗಾಂಧಿ, ಬಸವೇಶ್ವರ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯಪಾಲ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಪ್ರತಿಭಟನೆಯಲ್ಲಿ ಶಾಸಕರಾದ ಸಿ.ಎಸ್.ನಾಡಗೌಡ, ಯಶ್ವಂತರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠ್ಠಲ ಕಟಕದೊಂಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಮಾಜಿ ಶಾಸಕ ರಾಜು ಆಲಗೂರ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಮುಂತಾದವರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪ್ರತಿಭಟನಾ ರ್‍ಯಾಲಿಯಲ್ಲಿ ಭಾಗವಹಿಸಿದ್ದರು.