ಬಾಂಗ್ಲಾ ಹಿಂದೂಗಳ ರಕ್ಷಣೆಗೆ ರಾಮದೇವ್ ಆಗ್ರಹ
ನವದೆಹಲಿ,ಅ.೭-ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ಪರವಾಗಿ ಭಾರತ ನಿಲ್ಲಬೇಕು ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಮೂಲಭೂತವಾದಿಗಳು ಹಿಂದೂ ಮನೆಗಳು, ದೇವಾಲಯಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ದೇವಾಲಯಗಳು, ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳ ಮೇಲಿನ ದಾಳಿಯನ್ನು ಯೋಗ ಗುರು ಬಾಬಾ ರಾಮ್‌ದೇವ್ ಮಂಗಳವಾರ ಖಂಡಿಸಿದ್ದಾರೆ. ನೆರೆಯ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ರಾಜಕೀಯ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಭಾರತವು ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳೊಂದಿಗೆ ಒಗ್ಗಟ್ಟಿನಿಂದ ನಿಲ್ಲಬೇಕು ಮತ್ತು ಅವರ ಸುರಕ್ಷತೆಗಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಾಬಾ ಒತ್ತಾಯಿಸಿದ್ದಾರೆ.
ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂ ಸಹೋದರರ ಪರವಾಗಿ ಭಾರತ ನಿಲ್ಲಬೇಕು. ಅಲ್ಲಿನ ಹಿಂದೂ ಬಾಂಧವರ ತಾಯಂದಿರು, ಸಹೋದರಿಯರು, ಹೆಣ್ಣು ಮಕ್ಕಳಿಗೆ ಅಪಾಯವಾಗದಂತೆ ಭಾರತ ಜಾಗೃತವಾಗಿರಬೇಕು. ನಾವು ಬಾಂಗ್ಲಾದೇಶವನ್ನು ನಿರ್ಮಿಸಲು ಸಹಾಯ ಮಾಡಿದ್ದೇವೆ. ಅಲ್ಲಿರುವ ಹಿಂದೂಗಳನ್ನು ರಕ್ಷಿಸುವಲ್ಲಿ ನಮ್ಮ ಶಕ್ತಿಯನ್ನೂ ತೋರಿಸಬೇಕು ಎಂದಿದ್ದಾರೆ.