ಪ್ರಾಸಿಕ್ಯೂಷನ್: ಇಂದು ತೀರ್ಮಾನ
ಬೆಂಗಳೂರು, ಆ. ೫- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.ಕಳೆದ ೪ ದಿನಗಳಿಂದ ದೆಹಲಿಯಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ ರಾಜ್ಯಕ್ಕೆ ವಾಪಸ್ಸಾಗಲಿದ್ದು, ಮುಖ್ಯಮಂತ್ರಿಗಳ ವಿರುದ್ಧದ ಪ್ರಾಸಿಕ್ಯೂಷನ್ ಮನವಿಗೆ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ರಾಜ್ಯಪಾಲರಿಗೆ ಮನವಿ ಮಾಡಿದ್ದರು.ಈ ಮನವಿ ಆಧರಿಸಿ ರಾಜ್ಯಪಾಲರು ಸರ್ಕಾರಕ್ಕೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ರಾಜ್ಯಪಾಲರ ಈ ಶೋಕಾಸ್ ನೋಟಿಸ್ ರಾಜ್ಯದಲ್ಲಿ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು.ರಾಜ್ಯಪಾಲರು ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡಿದ ಬೆನ್ನಲ್ಲೆ ರಾಜ್ಯ ಸಚಿವ ಸಂಪುಟ ಸಭೆ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮಪಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್‌ನ್ನು ವಾಪಸ್ ಪಡೆಯಬೇಕು ಹಾಗೂ ಪ್ರಾಸಿಕ್ಯೂಷನ್ ಮನವಿಯನ್ನು ತಿರಸ್ಕರಿಸಬೇಕು ಎಂಬ ಸಲಹೆಯನ್ನು ಸಚಿಪ ಸಂಪುಟ ಸಭೆ ರಾಜ್ಯಪಾಲರಿಗೆ ನೀಡಿತ್ತು.
ಸಚಿವ ಸಂಪುಟ ಸಭೆ ರಾಜ್ಯಪಾಲರಿಗೆ ನೀಡಿದ ಸಲಹೆಯನ್ನು ರಾಜಭವನಕ್ಕೆ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲರು ಕಳೆದ ೪ ದಿನಗಳಿಂದ ಬೆಂಗಳೂರಿನಲ್ಲಿ ಇರದ ಕಾರಣ ಪ್ರಾಸಿಕ್ಯೂಷನ್ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲು ಆಗಿರಲಿಲ್ಲ. ಇಂದು ರಾಜ್ಯಪಾಲರು ಬೆಂಗಳೂರಿಗೆ ಮರಳಲಿದ್ದು, ಮುಖ್ಯಮಂತ್ರಿಗಳ ವಿರುದ್ಧದ ಪ್ರಾಸಿಕ್ಯೂಷನ್ ಬಗ್ಗೆ ಒಂದು ತೀರ್ಮಾನ ಕೈಗೊಳ್ಳುವರು.ರಾಜ್ಯಪಾಲರು ರಾಜ್ಯ ಸಚಿವ ಸಂಪುಟ ಸಭೆಯ ಸಲಹೆಯನ್ನು ಒಪ್ಪುತ್ತಾರೆಯೇ, ಇಲ್ಲ ತಿರಸ್ಕರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುತ್ತಾರೆಯೇ ಎಂಬುದು ಈಗ ಕುತೂಹಲ ಮೂಡಿಸಿದ್ದು, ಎಲ್ಲರ ಗಮನ ರಾಜ್ಯಪಾಲರ ನಿರ್ಧಾರದತ್ತ ನೆಟ್ಟಿದೆ.
ಕಾನೂನು ಹೋರಾಟ: ಪರಂ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಆ ಬಗ್ಗೆ ಕಾನೂನು ಹೋರಾಟ ನಡೆಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ರಾಜ್ಯ ಸಚಿವ ಸಂಪುಟದ ಸಲಹೆಯನ್ನು ಒಪ್ಪುತ್ತಾರೆ ಎಂಬ ವಿಶ್ವಾಸವಿದೆ. ಅವರು ರಾಜ್ಯಸರ್ಕಾರಕ್ಕೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತಾರೆ. ಹಾಗೆಯೇ ಈ ಪ್ರಕರಣದಲ್ಲಿ ಸತ್ಯಾಂಶ ಇಲ್ಲ ಎಂಬ ಸಚಿವ ಸಂಪುಟದ ನಿರ್ಣಯವನ್ನು ಒಪ್ಪುತ್ತಾರೆ ಎಂಬ ನಂಬಿಕೆ ಇದೆ. ಜತೆಗೆ ಪ್ರಾಸಿಕ್ಯೂಷನ್ ಮನವಿಯನ್ನು ತಿರಸ್ಕರಿಸುವ ವಿಶ್ವಾಸವೂ ಇದೆ ಎಂದು ಹೇಳಿದರು.ರಾಜ್ಯ ಸಚಿವ ಸಂಪುಟ ಸಭೆಯ ಸಲಹೆಯನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುತ್ತಾರೆ ಎಂದು ನಾನು ಭಾವಿಸಲ್ಲ ಎಂದರು.
ರಾಜ್ಯಪಾಲರಿಗೆ ಅವರದೇ ಆದ ದತ್ತವಾದ ಅಧಿಕಾರ ಇರಬಹುದು. ಆದರೆ ಸಂಪುಟ ಸಭೆಯ ಸಲಹೆಯನ್ನು ಅವರು ಸುಲಭವಾಗಿ ತಿರಸ್ಕಾರ ಮಾಡುವುದಿಲ್ಲ ಎಂದುಕೊಂಡಿದ್ದೇನೆ. ಒಂದು ವೇಳೆ ಎಲ್ಲವನ್ನೂ ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ನಾವು ಕೂಡಾ ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.