ನೋಟಿಸ್ ವಾಪಸ್ಸಿಗೆ ನಿರ್ಣಯ
ಮುಡಾ ಹಗರಣ
ಬೆಂಗಳೂರು, ಆ. ೧- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸರ್ಕಾರಕ್ಕೆ ನೀಡಿರುವ ನೋಟಿಸ್‌ನ್ನು ಹಿಂಪಡೆಯಬೇಕು ಎಂಬ ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗೈರು ಹಾಜರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿವರ ಕೋರಿ ರಾಜ್ಯಪಾಲರು ಸರ್ಕಾರಕ್ಕೆನೀಡಿರುವ ನೋಟಿಸ್‌ನ್ನು ವಾಪಸ್ ಪಡೆಯಬೇಕು ಹಾಗೂ ಈ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದು ಎಂಬ ನಿರ್ಣಯವನ್ನು ಸಂಪುಟದಲ್ಲಿ ಎಂದು ಗೊತ್ತಾಗಿದೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಸಲ್ಲಿಸಿದ್ದ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಬಗ್ಗೆ ವಿವರ ನೀಡುವಂತೆ ಸರ್ಕಾರಕ್ಕೆ ನೋಟಿಸ್ ನೀಡಿದ್ದರು.
ರಾಜ್ಯಪಾಲರ ನೋಟಿಸ್ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, ರಾಜ್ಯಪಾಲರು ನೀಡಿರುವ ನೋಟಿಸ್‌ನ್ನು ಹಿಂಪಡೆಯುವ ತೀರ್ಮಾನವನ್ನು ಸಚಿವ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಕೈಗೊಳ್ಳಲಾಗಿದೆ.ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿಲ್ಲ. ಹೀಗಿರುವಾಗ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವುದು ಸ ರಿಯಲ್ಲ. ರಾಜ್ಯಪಾಲರು ಗಣನೆಗೆ ತೆಗೆದುಕೊಂಡು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವುದು ತಿರಸ್ಕರಿಸಬೇಕು. ಹಾಗೇಯ ನೋಟಿಸ್ ಹಿಂಪಡೆಯಬೇಕು ಎಂಬ ಶಿಫಾರಸ್ಸನ್ನು ರಾಜ್ಯಪಾಲರಿಗೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.
ಏನಿದು ಪ್ರಕರಣ
ಮುಡಾದಲ್ಲಿ ಅಕ್ರಮ ನಡೆದಿದೆ. ಮುಖ್ಯಮಂತ್ರಿ ಪತ್ನಿ ಅವರ ಹೆಸರಿಗೆ ೧೪ ನಿವೇಶನಗಳನ್ನು ಮಂಜೂರು ಮಾಡಿರುವುದು ಕಾನೂನುಬಾಹಿರ. ಹಾಗಾಗಿ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಹೆಸರು ಕೇಳಿ ಬರುತ್ತಿದೆ. ಹಾಗಾಗಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಬೇಕು ಎಂದು ಟಿ.ಜೆ. ಅಬ್ರಾಹಂ ರಾಜ್ಯಪಾಲರಿಗೆ ಮನವಿ ಮಾಡಿದರು.ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಅವರ ಮನವಿ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಜ್ಯ ಸರ್ಕಾರಕ್ಕ ನೋಟಿಸ್ ಜಾರಿ ಮಾಡಿ ಈ ಪ್ರಕರಣದ ಬಗ್ಗೆ ವಿವರ ನೀಡುವಂತೆ ಸೂಚಿಸಿದ್ದರು.ಈ ಹಿನ್ನೆಲೆಯಲ್ಲಿ ಇಂದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆಯಾಗಿ ನೋಟಿಸ್ ಹಿಂಪಡೆಯಬೇಕು ಎಂದು ನಿರ್ಣಯವನ್ನು ಕೈಗೊಳ್ಳಲಾಯಿತು.
ಉಪಹಾರ ಸಭೆ
ಸಚಿವ ಸಂಪುಟ ಸಭೆಗೂ ಮುನ್ನ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧಿಕೃತ ನಿವಾಸದಲ್ಲಿ ಎಲ್ಲ ಸಚಿವರಿಗೆ ಉಪಹಾರ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರು ಭಾಗಿಯಾಗಿದ್ದು, ಮುಖ್ಯಮಂತ್ರಿಗಳ ಬೆಂಬಲಕ್ಕೆ ನಿಲ್ಲುವ ಬಗ್ಗೆ ಒಕ್ಕೊರಲಿನ ತೀರ್ಮಾನವನ್ನು ಈ ಸಭೆಯಲ್ಲಿ ಮಾಡಲಾಗಿತ್ತು.ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಡಾ ಹಗದರಣದಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ. ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಮತ್ತು ಜೆಡಿಎಸ್ ತಂತ್ರ ನಡೆಸಿವೆ ಎಂಬ ಮಾತುಗಳನ್ನು ಈ ಸಭೆಯಲ್ಲಿ ಸಚಿವರುಗಳಾಡಿದ್ದು ಮುಖ್ಯಮಂತ್ರಿಗಳಿಗೆ ನೈತಿಕ ಬೆಂಬಲ ನೀಡುವ ಬಗ್ಗೆಯೂ ಎಲ್ಲ ಸಚಿವರು ಒಮ್ಮತದ ತೀರ್ಮಾನಕ್ಕೆ ಬಂದಿದ್ದರು.
ಕಾನೂನು ಹೋರಾಟ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ನೋಟಿಸ್‌ನ್ನು ವಾಪಸ್ ಪಡೆಯಬೇಕು ಹಾಗೂ ಪ್ರಾಸಿಕ್ಯೂಷನ್ ಅನುಮತಿ ನೀಡಬಾರದು ಎಂಬ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಕೈಗೊಳ್ಳಲಾಯಿತು.
ರಾಜ್ಯಪಾಲರು ಒಪ್ಪದಿದ್ದರೆ ಅದರ ವಿರುದ್ಧ ಕಾನೂನು ಹೋರಾಟ ನಡೆಸುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ್ಯವರ ಗೈರು ಹಾಜರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ರವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿರಾಜ್ಯಪಾಲರ ನೀಡಿರುವ ನೋಟಿಸ್ ವಾಪಸ್ ನಿರ್ಣಯವನ್ನು ಕೈಗೊಳ್ಳುವ ಜತೆಗೆ ಒಂದು ವೇಳೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯವನ್ನು ಮಾನ್ಯ ಮಾಡಿದಿದ್ದರೆ ಅದರ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಹೇಳಲಾಗಿದೆ.
ಸಿಎಂ ಗೈರು
ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಇದೇ ಮೊದಲ ಬಾರಿಗೆ ಸಚಿವ ಸಂಪುಟದಿಂದ ಹೊರಗುಳಿದು ಅವರ ಗೈರು ಹಾಜರಿಯಲ್ಲಿ ಸಂಪುಟ ಸಭೆ ನಡೆದಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು ಎಂದು ಹೇಳಲಾಗಿದೆ.ಸಾಮಾನ್ಯವಾಗಿ ಯಾವುದೇ ಸಚಿವ ಸಂಪುಟ ಸಭೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಬೇಕು. ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಿದ್ದನ್ನು ವಾಪಸ್ ಪಡೆಯಬೇಕು ಎಂದು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಬೇಕಾಗಿದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಸಚಿವ ಸಂಪುಟ ಸಭೆಯಿಂದ ಹೊರಗುಳಿದರು.ಹೀಗೆ ಮುಖ್ಯಮಂತ್ರಿಯಾದವರು ಸಚಿವ ಸಂಪುಟದಿಂದ ಹೊರಗುಳಿದು ಸಂಪುಟ ಸಭೆ ನಡೆದಿದ್ದು ಇದೇ ಮೊದಲು ಎಂದು ಹೇಳಲಾಗಿದೆ.
ರಾಜ್ಯಪಾಲರು ದೆಹಲಿಗೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ ನಂತರ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಾಗಿರುವಾಗಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ರಾಜ್ಯಪಾಲರಿಗೆ ಮುಡಾ ಹಗರಣದ ಬಗ್ಗೆ ದೂರು ನೀಡಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿವರಣೆ ಕೋರಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದರು.
ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗಳಾಗಿ ರಾಜ್ಯಪಾಲರು ನೋಟಿಸ್ ವಾಪಸ್ ಪಡೆಯಬೇಕು ಎಂಬ ನಿರ್ಣಯಗಳನ್ನು ಮಾಡಲಾಗಿದೆ.
ಇಷ್ಟೆಲ್ಲಾ ಬೆಳವಣಿಗೆಗಳ ನಡುವೆಯೇ ರಾಜ್ಯಪಾಲರು ದಿಢೀರೆಂದು ದೆಹಲಿಗೆ ತೆರಳಿದ್ದಾರೆ. ರಾಜ್ಯಪಾಲರ ದೆಹಲಿ ಭೇಟಿ ಕುತೂಹಲ ಕೆರಳಿಸಿದೆ.