ಭಯೋತ್ಪಾದನೆ ಮುಂದುವರೆದರೆ ಪಾಕ್ ೩ ಭಾಗ
ಕಥುವಾ (ಜಮ್ಮು ಮತ್ತು ಕಾಶ್ಮೀರ),ಸೆ.೨೮- ಪಾಕಿಸ್ತಾನವು ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ಮುಂದುವರಿಸಿದರೆ ಅದು ಮೂರು ಭಾಗವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.ರಾಜಕೀಯ ಲಾಭಕ್ಕಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲಾಗಿದೆ ಎಂದು ಕುಟುಕಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಯೋಗಿ, ಪಾಕಿಸ್ತಾನವನ್ನು ಬೆಂಬಲಿಸುವ ಭಯೋತ್ಪಾದಕರಿಗೂ ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ. ಭಯೋತ್ಪಾದನೆ ಪಾಕಿಸ್ತಾನವನ್ನು ಮೂರು ಭಾಗಗಳಾಗಿ ವಿಭಜಿಸಲು ಕಾರಣವಾಗಬಹುದು ಎಂದು ಎಚ್ಚರಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತದೊಂದಿಗೆ ವಿಲೀನಗೊಳ್ಳಲು ಸಿದ್ಧವಾಗಿದೆ. ಅಲ್ಲಿನ ಜನರಿಗೆ ಪಾಕಿಸ್ತಾನದಿಂದ ಸ್ವಾತಂತ್ರ್ಯ ಬೇಕು. ಅವರು ಅಭಿವೃದ್ಧಿ, ಪಡಿತರ, ಶಾಂತಿ ಮತ್ತು ಆಯುಷ್ಮಾನ್ ಆರೋಗ್ಯ ಚೀಟಿಗಳಿಗೆ ಆಗ್ರಹಿಸುತ್ತಿದ್ದಾರೆ. ಆದರೆ, ಇದೆಲ್ಲವೂ ಭಾರತದಲ್ಲಿ ಮಾತ್ರ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಒತ್ತಾಯಿಸಿದ ಉತ್ತರ ಪ್ರದೇಶ ಸಿಎಂ, ಈ ಪ್ರದೇಶದಲ್ಲಿ ಉತ್ತಮ ಆಡಳಿತ, ಶಾಂತಿ, ಸ್ಥಿರತೆ ಮತ್ತು ಅಭಿವೃದ್ಧಿಗೆ ನಿಮ್ಮ ಮುಂದಿರುವ ಏಕೈಕ ಆಯ್ಕೆ ಇದಾಗಿದೆ ಎಂದು ಹೇಳಿದರು.
ಪಾಕಿಸ್ತಾನದ ಆರ್ಥಿಕ ದುಸ್ಥಿತಿಯನ್ನು ಉಲ್ಲೇಖಿಸಿದ ಅವರು ಪಾಕಿಸ್ತಾನದ ಪರಿಸ್ಥಿತಿ ಭಿಕ್ಷುಕನ ಬಟ್ಟಲಿನಂತಾಗಿದೆ. ಬಲೂಚಿಸ್ತಾನ್ ಪ್ರಾಂತ್ಯದ ಜನರನ್ನು ವಿದೇಶಿಯರಂತೆ ಪರಿಗಣಿಸಲಾಗುತ್ತದೆ. ಹಾಗಾಗಿ ಆ ಭಾಗದ ಜನರು ಪಾಕಿಸ್ತಾನದ ಜೊತೆ ಇರಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ವಿರುದ್ಧ ದೃಢವಾದ ನಿಲುವು ತಳೆದಿದ್ದಾರೆ ಎಂದು ಹೇಳಿದ ಯೋಗಿ, ಸಿಂಧೂ ನದಿ ನೀರು ಹಂಚಿಕೆ ಕುರಿತು ನೀರು ಮತ್ತು ಭಯೋತ್ಪಾದನೆ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಬೆಂಬಲದೊಂದಿಗೆ ಭಾರತದಲ್ಲಿ ಭಯೋತ್ಪಾದನೆಯನ್ನು ಹರಡಲು ಯಾರಾದರೂ ಪ್ರಯತ್ನಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಇಲ್ಲಿನ ನಾಯಕರು ಜಮ್ಮು ಮತ್ತು ಕಾಶ್ಮೀರದ ಪ್ರಭುಗಳಂತೆ ವರ್ತಿಸಿದ್ದಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಹಣದಲ್ಲಿ ವಿದೇಶ ಪ್ರವಾಸ ಮಾಡುತ್ತಿದ್ದರು. ಆದರೆ, ಇನ್ನು ಮುಂದೆ ಅದೆಲ್ಲ ನಡೆಯುವುದಿಲ್ಲ ಎಂದು ಕಿಡಿಕಾರಿದ್ದಾರೆ.