ನೀಟ್ -ಯುಜಿ 2024 ಮರು ಪರೀಕ್ಷೆ ಇಲ್ಲ: ಸುಪ್ರೀಂ ಮಹತ್ವದ ತೀರ್ಪು
ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ ನೀಟ್ – ಯುಜಿ ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಬಯಲಾಗಿರುವ ಹಿನ್ನೆಲೆಯಲ್ಲಿ ಮೇ 5 ರಂದು ನಡೆಸಲಾಗಿದ್ದ ನೀಟ್‌ ಪರೀಕ್ಷೆಯನ್ನು ಅಮಾನ್ಯ ಎಂದು ಘೋಷಿಸಿ ಮರು ಪರೀಕ್ಷೆಗೆ ಆದೇಶ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ಮುಂದುವರೆಸಿತು.
ಹೊಸದಾಗಿ ಮತ್ತೆ ಪರೀಕ್ಷೆ ನಡೆಸುವುದು 20ಲಕ್ಷ ವಿದ್ಯಾರ್ಥಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಕ್ರಮ ದೇಶವ್ಯಾಪಿ ನಡೆದಿಲ್ಲ. ಮರು ಪರೀಕ್ಷೆಗೆ ಆದೇಶಿಸಲು ಪೂರಕವಾದ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಹೇಳುವ ಮೂಲಕ ನೀಟ್ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿ ಅರ್ಜಿಯನ್ನು ವಿಲೇವಾರಿ ಮಾಡಿತು.
ಇಡೀ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ದೃಢವಾದರೆ ಮಾತ್ರ ಮರುಪರೀಕ್ಷೆ ನಡೆಸಬಹುದು” ಎಂದು ಮುಖ್ಯ ನ್ಯಾಯಮೂರ್ತಿಡಿ.ವೈ.ಚಂದ್ರಚೂಡ್ ತಿಳಿಸಿದರು.
ವಿವಾದ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದೆ. ಸಿಬಿಐ ನಮಗೆ ಹೇಳಿದ್ದನ್ನೆಲ್ಲ ಬಹಿರಂಗಪಡಿಸಿದರೆ, ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ಮೂರು ದಿನಗಳ ಹಿಂದೆಯಷ್ಟೇ ನೀಟ್‌ ಪರೀಕ್ಷೆಗಳ ಫಲಿತಾಂಶಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ, ನಗರ ಮತ್ತು ಕೇಂದ್ರವಾರು ಪ್ರಕಟವಾಗಿತ್ತು. ನೀಟ್-ಯುಜಿ ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸೂಚಿಸಿತ್ತು. ಆದರೆ ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದಂತೆ ಖಡಕ್‌ ಸೂಚನೆ ನೀಡಿತ್ತು.