ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ
ಬೆಂಗಳೂರು,ಜು.೨೨-ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಕೆಲ ದಿನಗಳ ಕಾಲ ಮಳೆಯ ಪ್ರಮಾಣ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಇಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಇಂದು ಕರ್ನಾಟಕದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಅಲ್ಲದೆ, ಜುಲೈ ೨೫ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಹಗಲಿನಲ್ಲಿ ಆಗಾಗ್ಗೆ ಮಳೆಯಾಗುವ ಸಾಧ್ಯತೆಯೂ ಇದೆ. ಮುಂದಿನ ಕೆಲವು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ ೨೪ ಗಂಟೆಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳೀಯ ಮುನ್ಸೂಚನೆ: ಹೆಚ್ಚಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ (೪೦-೫೦ ಕಿಮೀ) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ೨೭ ಲಿ ಸಿ ಮತ್ತು ೨೧ ಲಿ ಸಿ ಆಗಿರುತ್ತದೆ.
ಮುಂದಿನ ೪೮ ಗಂಟೆಗಳ ಕಾಲ ಹೆಚ್ಚಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ (೩೦-೪೦ ಕಿಮೀ) ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ೨೭ ಲಿ ಸಿ ಮತ್ತು ೨೧ ಲಿ ಸಿ ಆಗಿರುತ್ತದೆ.
ಹುಬ್ಬಳ್ಳಿಯಲ್ಲಿ ಸತತ ಮಳೆಯಿಂದಾಗಿ ಕೆರೆಗಳು ಜೀವ ಪಡೆದಿವೆ. ಉಣಕಲ್ ಕೆರೆ ತುಂಬಿ ಹರಿಯುತ್ತಿದೆ. ಹುಬ್ಬಳ್ಳಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಿಂದ ಉಣಕಲ್ ಕೆರೆ ತುಂಬಿದೆ. ಕೆರೆಯಿಂದ ನೀರು ಹರಿದು ರಾಜಕಾಲುವೆ ಸೇರುತ್ತದೆ. ನದಿ ಹರಿಯುವ ಸುಂದರ ದೃಶ್ಯಗಳು ಪ್ರವಾಸಿಗರನ್ನು ಆಹ್ವಾನಿಸುತ್ತಿವೆ.
ಉತ್ತರದ ಒಳಗಿನ ಎಲ್ಲಾ ಜಿಲ್ಲೆಗಳ ಮೇಲೆ ನಿರಂತರ ಗಾಳಿಯ ವೇಗ (೩೦-೪೦ ಕಿಮೀ) ಜೊತೆಗೆ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಎಲ್ಲಾ ದಕ್ಷಿಣ ಒಳಗಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (೩೦-೪೦ ಕಿಮೀ) ಸಾಧ್ಯತೆ ಇದೆ.
ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕಿತ್ತಳೆ ,ಹಾಸನದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಕೊಡಗು, ಧಾರವಾಡ, ಯಾದಗಿರಿ ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡ್ಡಗಾಡು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಶಾಲೆಗಳಿಗೆ ರಜೆ
ರಾಜ್ಯದಲ್ಲಿ ವ್ಯಾಪಕವಾಗಿ ಮುಂದುವರೆದ ಮಳೆಯ ಹಿನ್ನೆಲೆಯಲ್ಲಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮುಂದಿನ ೪೮ ಗಂಟೆಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೋಮವಾರ ಮತ್ತು ಮಂಗಳವಾರ ರಜೆ ಘೋಷಿಸಲಾಗಿದೆ. ಖಾನಾಪುರದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಇಂದು ಜಿಲ್ಲೆಯ ಎಲ್ಲಾ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ.