ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ‌ ಉದ್ಯೋಗ ಮೀಸಲು ವಿಧೇಯಕಕ್ಕೆ ತಾತ್ಕಾಲಿಕ ತಡೆ
ಬೆಂಗಳೂರು, ಜು.17-ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು.
ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಸರ್ಕಾರ ತಿಳಿಸಿದೆ.
ಆದರೆ ಹಠಾತ್ತನೆ ಸಂಪುಟದಲ್ಲಿ ಕೈಗೊಳ್ಳಲಾಗಿದ್ದ ವಿಧೇಯಕಕ್ಕೆ ತಡೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50 ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಮೀಸಲಾತಿ ಕಡ್ಡಾಯಗೊಳಿಸಿರುವ ಕರಡು ಮಸೂದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿತ್ತು.
ಇದಕ್ಕೆ ಉದ್ಯಮ ರಂಗದ ಪ್ರಮುಖರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ಈ ಕಾಯಿದೆ ಜಾರಿಯಾದರೆ ಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯ ಸಿಗಲಿದೆ ಎಂಬ ಸಂತಸ ಸ್ಥಳೀಯ ಯುವ ಜನತೆಯಿಂದ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇಈಗ ಏಕಾಏಕಿ ವಿಧೇಯಕಕ್ಕೆ ತಡೆ ಹಿಡಿಯಲಾಗಿದೆ.
ರಾಜ್ಯದಲ್ಲಿ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಶೇಕಡಾವಾರು ಇಂತಿಷ್ಟು ಉದ್ಯೋಗ ಸಿಗಬೇಕೆಂಬ‌ ದೃಷ್ಟಿಯಿಂದ ಸಚಿವ ಸಂಪುಟದಲ್ಲಿ ‌ನಿರ್ಧಾರ ಕೈಗೊಂಡಿರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದರು.