ಧಾರ್ಮಿಕ ಕಾರ್ಯಕ್ರಮದಲ್ಲಿ ಭೀಕರ‌ ಕಾಲ್ತುಳಿತ: ಮಹಿಳೆಯರು ಸೇರಿ 100 ಮಂದಿ ಸಾವು
ಲಕ್ನೋ, ಜು.2- ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭೀಕರ ಕಾಲ್ತುಳಿತದಲ್ಲಿ ಮಹಿಳೆಯರು ಸೇರಿ ಒಟ್ಟು 100 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಆತಂಕ ಎದುರಾಗಿದೆ.
ರತಿಭಾನಪುರದಲ್ಲಿ ಭೋಲೆಬಾಬಾ ಪ್ರವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಕಾಲ್ತುಳಿತ ಉಂಟಾಗಿ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿದ ತಕ್ಷಣ‌ ಪೊಲೀಸರು ಮತ್ತು ಪರಿಹಾರ ತಂಡ ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಇನ್ನು ಪ್ರವಚನದಲ್ಲಿ ಪಾಲ್ಗೊಳ್ಳಲು ಬಂದಿದ್ದ ನೂರಾರು ಭಕ್ತರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋದರು. ಸಾವಿನ ಸಂಖ್ಯೆ ಹೆಚ್ಚಳವಾಗುವ ಭೀತಿ ತಲೆದೋರಿದೆ.
ಇನ್ನೊಂದು ಕಡೆ ಸಿಎಂ ಸೂಚನೆ ಮೇರೆಗೆ ತನಿಖಾ ಸಮಿತಿ ರಚಿಸಲಾಗಿದೆ. ಅಪಘಾತದ ಕಾರಣವನ್ನು ತನಿಖೆ ಮಾಡಲು ಎಡಿಜಿ ಆಗ್ರಾ ಮತ್ತು ಕಮಿಷನರ್ ಅಲಿಗಢ್ ತಂಡವನ್ನು ರಚಿಸಲಾಗಿದೆ.
ಯೋಗಿ ಸಂತಾಪ
ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಯೋಗಿ ಅವರು ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸ್ಥಳಕ್ಕೆ ಹೋಗುವಂತೆ ಸೂಚಿಸಿದ್ದಾರೆ. ಪರಿಹಾರ ಕಾರ್ಯವನ್ನು ವೇಗಗೊಳಿಸಲು ಮತ್ತು ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇವೆ ಎಂದು ಸಿಎಂ ಯೋಗಿ ಹೇಳಿದ್ದಾರೆ.