ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ
ಖಾಸಗಿ ವಲಯದ ಶೇ. ೧೦೦ ರಷ್ಟು ಹುದ್ದೆಗಳು ಕನ್ನಡಿಗರೇ ದಕ್ಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಕರವೇ ಮುಖಂಡರು, ಕಾರ್ಯಕರ್ತರು ಇಂದು ನಗರದ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.
ಬೆಂಗಳೂರು,ಜು.೧-ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಸೇರಿದ ಸಾವಿರಾರು ಕಾರ್ಯಕರ್ತರು,ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ ೧೦೦ ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್?ಗಳಲ್ಲಿ ಶೇಕಡಾ ೮೦ ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದರು.
ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ
ನಾರಾಯಣಗೌಡ ಅವರು ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಿ ಎಂದು ಚಳವಳಿ ಮಾಡುವಂಥ ಸ್ಥಿತಿಗೆ ಬಂದಿರುವುದೇ ನಾಚಿಕೆಗೇಡು. ಕನ್ನಡಿಗರು ಶಾಂತಿಪ್ರಿಯರಾಗಿರುವ ಕಾರಣ ಅನ್ಯರು ಸವಾರಿ ಮಾಡುತ್ತಿದ್ದಾರೆ. ಕನ್ನಡಿಗರು ಈಗ ಒಂದಾಗಿ ನಿಲ್ಲಬೇಕಾದ ಅನಿವಾರ್ಯತೆ ಇದೆ. ಕನ್ನಡಿಗರ ಹಕ್ಕುಗಳನ್ನು ಹೊರ ರಾಜ್ಯಗಳಿಂದ ಬಂದವರು ಅನುಭವಿಸುತ್ತಿದ್ದು, ಕನ್ನಡಿಗರು ನಿರುದ್ಯೋಗಿಗಳಾಗಿ ಅಲೆಯುತ್ತಿದ್ದಾರೆ. ಈಗ ನಾವು ಸಿಡಿದು ನಿಲ್ಲದೇ ಹೋದಲ್ಲಿ ಖಂಡಿತ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.
ಕನ್ನಡಿಗರಿಗೆ ಉದ್ಯೋಗಕ್ಕಾಗಿ ನಡೆಯುವ ಪ್ರತಿಭಟನೆಗೆ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಬೆಂಬಲ ಘೋಷಿಸಿದ್ದರೆ, ನಟಿ ಪೂಜಾ ಗಾಂಧಿ, ನೆನಪಿರಲಿ ಪ್ರೇಮ್ ರಿದಂತೆ ಅನೇಕ ಕಲಾವಿದರು ಪ್ರತಿಭಟನೆ ಬೆಂಬಲ ಸೂಚಿಸಿದ್ದರು. ಕರ್ನಾಟಕದಲ್ಲಿನ ಉದ್ಯೋಗಗಳ ಮೇಲೆ ಮೊದಲ ಹಕ್ಕು ಮತ್ತು ಆದ್ಯತೆ ಕನ್ನಡಿಗರಿಗೆ ಸಿಗಬೇಕು. ಈ ಹೋರಾಟದಲ್ಲಿ ನಾನು ಭಾಗವಹಿಸುತ್ತೇನೆ ಎಂದು ಪೂಜಾ ಗಾಂಧಿ ಹೇಳಿದ್ದಾರೆ.