ಮುಂಗಾರು ಚುರುಕು 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಬೆಂಗಳೂರು,ಜೂ.೨೪-ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ, ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ೭ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಮತ್ತು ಒಳನಾಡಿನ ಕೆಲವೆಡೆ ಹೆಚ್ಚಾಗಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ೨೫ ಜೂನ್ ೨೦೨೪ ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಲವಾದ ಗಾಳಿ ಮತ್ತು ಭೂಕುಸಿತದ ಸಾಧ್ಯತೆಗಳಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಹೇಳಿದ್ದಾರೆ.
ಮುಂದಿನ ೨೪ ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗಂಟೆಗೆ ೪೦ ರಿಂದ ೫೦ ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗು ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರುಒಳ ಕರ್ನಾಟಕದ ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳು. ಬಿರುಗಾಳಿ ಸಹಿತ ಸಾಧಾರಣ ಮಳೆ ಇದು ಸಾಧ್ಯತೆ ಇದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ೨೪ ಗಂಟೆಗಳ ಕಾಲ ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ೩೦ ಡಿಗ್ರಿ ಮತ್ತು ೨೧ ಡಿಗ್ರಿ ಇರುತ್ತದೆ ಎಂದು ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು, ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಶನಿವಾರ ಅತಿ ಹೆಚ್ಚು ೫ ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ೪ ಸೆಂ.ಮೀ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ೪ ಸೆಂ.ಮೀ ಮಳೆಯಾಗಿದೆ.
ಮೀನುಗಾರರಿಗೆ ಎಚ್ಚರಿಕೆ-೪೫ ರಿಂದ ೫೫ ಕಿ.ಮೀ. ವೇಗದಲ್ಲಿ ಕರ್ನಾಟಕ ಕರಾವಳಿಯುದ್ದಕ್ಕೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.