ಚಿನ್ನೇನಹಳ್ಳಿ ಆಸ್ಪತ್ರೆಗೆ ಪರಮೇಶ್ವರ್ ಭೇಟಿ
ತುಮಕೂರು, ಜೂ. ೧೩- ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ವಾಂತಿ-ಭೇದಿಯಿಂದ ಅಸ್ವಸ್ಥರಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಚಾರಿಸಿದರು.
ನಗರದ ಜಿಲ್ಲಾಸ್ಪತ್ರೆಗೆ ಇಂದು ಬೆಳಿಗ್ಗೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕಲುಷಿತ ನೀರು ಸೇವನೆಯಿಂದಾಗಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯಲು ದಾಖಲಾಗಿರುವ ರೋಗಿಗಳ ವಾರ್ಡ್‌ಗಳಿಗೆ ತೆರಳಿ ಪ್ರತಿಯೊಬ್ಬರ ಆರೋಗ್ಯವನ್ನು ಕೂಲಂಕುಷವಾಗಿ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ ಅವರು, ಚಿನ್ನೇನಹಳ್ಳಿ ಗ್ರಾಮದಲ್ಲಿ ಜಾತ್ರೆ ಆಚರಣೆ ಮಾಡುತ್ತಿದ್ದ ಸಂದರ್ಭದಲ್ಲಿ ನೀರು ಕುಡಿದ ೧೦೦ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿಯಾಗಿದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ. ಅಸ್ವಸ್ಥಗೊಂಡ ಗ್ರಾಮಸ್ಥರು ಸರ್ಕಾರಿ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಈಗಾಗಲೇ ಚಿನ್ನೇನಹಳ್ಳಿ ಗ್ರಾಮಕ್ಕೆ ಸಿಇಓ, ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಾದೃಷ್ಟವಶಾತ್ ಚಿಕ್ಕದಾಸಪ್ಪ (೭೬) ಹಾಗೂ ಪೆದ್ದಣ್ಣ (೭೨) ಎಂಬ ಇಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಕಲುಷಿತ ನೀರಿನ ಸೋಂಕಿನಿಂದಲೇ ಇವರ ಸಾವು ಸಂಭವಿಸಿದೆ ಎಂದರು. ಕಲುಷಿತ ನೀರು ಪೂರೆಕೆ ಹಿನ್ನೆಲೆಯಲ್ಲಿ ಈಗಾಗಲೇ ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ಪಿಡಿಓ ಹಾಗೂ ವಾಟರ್ ಮನ್‌ಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಕಲುಷಿತವಾದ ನೀರು ಹೇಗೆ ಪೈಪ್‌ಲೈನ್‌ಗೆ ಮಿಶ್ರಣಗೊಂಡಿದೆ ಎಂಬುದನ್ನು ಅಧಿಕಾರಿಗಳು ಈಗಾಗಲೇ ಪತ್ತೆ ಹಚ್ಚಿದ್ದಾರೆ. ವಾಟರ್ ಪೈಪ್‌ಲೈನ್‌ಗಳು ಒಡೆದು ಹೋಗಿದ್ದು, ಬೇರೆ ಪೈಪ್‌ಲೈನ್‌ಗಳಿಗೆ ಜೋಡಣೆಯಾಗಿ ಈ ರೀತಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ಒಟ್ಟಾರೆ ಕಲುಷಿತ ನೀರಿನ ಸೇವನೆಯಿಂದ ಈ ಅನಾಹುತ ಸಂಭವಿಸಿದೆ. ಇನ್ನು ಸಹ ಶಾಲಾ ಮಕ್ಕಳು, ಮಹಿಳೆಯರು, ವೃದ್ಧರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಜಿಲ್ಲೆಯ ಎಲ್ಲಾ ಪಂಚಾಯ್ತಿಗಳಲ್ಲೂ ಸಹ ಜಲಜೀವನ್ ಮಿಷನ್, ಬೇರೆ ಬೇರೆ ವಾಟರ್ ಸಿಸ್ಟಂ, ಆರ್‌ಓ ಪ್ಲಾಂಟ್‌ಗಳ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಾಳೆ ನಾನು ಸಹ ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಿ ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದರು.
ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡುವುದಾಗಿ ಅವರು ಹೇಳಿದರು.
ಮೃತಪಟ್ಟಿರುವ ಕುಟುಂಬದವರಿಗೆ ಪರಿಹಾರ ಕೊಡುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದ ಅವರು, ಜಿಲ್ಲಾಡಳಿತದ ವತಿಯಿಂದ ಪರಿಹಾರ ಕೊಡಲು ಬರುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಓ ಜಿ. ಪ್ರಭು, ಎಸ್ಪಿ ಅಶೋಕ್, ಡಿಹೆಚ್‌ಓ ಡಾ. ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಜ್ಗರ್ ಬೇಗ್ ಮತ್ತಿತರರು ಉಪಸ್ಥಿತರಿದ್ದರು.