ಮುಂಗಾರು ಬಿರುಸು: 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು,ಜೂ.೧೧- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹವಾಮಾನ ಇಲಾಖೆ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿನ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.
ಇಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ ೪೦ ರಿಂದ ೫೦ ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಮೈಸೂರು, ಹಾಸನ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ೩೦ ಡಿಗ್ರಿ ಮತ್ತು ೨೧ ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೊನ್ನಾವರದಲ್ಲಿ ಸೋಮವಾರ ಬೆಳಗ್ಗೆಯಿಂದ ೩೧.೪ ಮೀ. ಎಂ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ೨೫.೮, ಶಿರಾಲಿಯಲ್ಲಿ ೧೬.೮, ಆಗುಂಬೆಯಲ್ಲಿ ೧೪.೫, ಕಲಬುರಗಿಯಲ್ಲಿ ೧೧ ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.