ಮತ್ತೆ ನಮೋ ಯುಗ
ನವದೆಹಲಿ,ಜೂ.೯:ದೇಶದ ಪ್ರಧಾನಿಯಾಗಿ ನರೇಂದ್ರಮೋದಿ ಅವರ ಪಟ್ಟಾಭೀಷೇಕ ಇಂದು ನಡೆಯಲಿದ್ದು, ಮೋದಿ ಅವರು ಸತತ ೩ನೇ ಬಾರಿಗೆ ಪ್ರಧಾನಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸುವರು.
ರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ೭.೧೫ರ ಶುಭಮುಹೂರ್ತದಲ್ಲಿ ಮೋದಿ ಅವರು ದೇಶದ ಪ್ರಧಾನಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸುವರು.
ಪ್ರಧಾನಿ ಮೋದಿ ಅವರ ಜತೆ ೩೦ ಸಚಿವರುಗಳು ಪ್ರಮಾಣವಚನ ಸ್ವೀಕರಿಸಿದ್ದು, ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬರುವ ಮೂಲಕ ದೇಶದಲ್ಲಿ ನರೇಂದ್ರಮೋದಿ ಅವರ ಆಳ್ವಿಕೆ ಮುಂದುವರೆಯಲಿದೆ.
ರಾಷ್ಟ್ರಪತಿ ಭವನ ಸಜ್ಜು
ಪ್ರಧಾನಿ ನರೇಂದ್ರಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಷ್ಟ್ರಪತಿ ಭವನದಲ್ಲಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ರಾಷ್ಟ್ರಪತಿ ಭವನವನ್ನು ನೂತನ ಪ್ರಧಾನಿಯ ಪ್ರಮಾಣವಚನ ಸಮಾರಂಭಕ್ಕೆ ಆಕರ್ಷಣಿಯವಾಗಿ ಸಿಂಗಾರಗೊಳಿಸಲಾಗಿದೆ.
ರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ೭.೧೫ಕ್ಕೆ ರಾಷ್ಟ್ರಪತಿ ದ್ರೌಪದಿಮುರ್ಮು ಅವರು ನೂತನ ಪ್ರಧಾನಿ ನರೇಂದ್ರಮೋದಿ ಮತ್ತು ಅವರ ಸಚಿವ ಸಂಪುಟದ ಎಲ್ಲ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನವನ್ನು ಬೋಧಿಸುವರು.
ಗಣ್ಯರಿಗೆ ಆಹ್ವಾನ
ನೂತನ ಪ್ರಧಾನಿಯಾಗಿ ನರೇಂದ್ರಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ದೇಶ-ವಿದೇಶದ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ರಾಷ್ಟ್ರಪತಿ ಭವನದಲ್ಲಿ ೮ ಸಾವಿರ ಆಸನಗಳಿಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಧಾನಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇವರೂ ಭಾಗಿಯಾಗಲಿದ್ದು, ಕಾಂಗ್ರೆಸ್‌ನ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೂ ಆಹ್ವಾನ ನೀಡಲಾಗಿದೆ. ಇದರ ಜತೆಗೆ ಎನ್‌ಡಿಎ ಮಿತ್ರಪಕ್ಷಗಳಾದ ಟಿಡಿಪಿ ಮುಖ್ಯಸ್ಥ ಚಂದ್ರಬಾಬುನಾಯ್ಡು, ಜೆಡಿಯು ಮುಖ್ಯಸ್ಥ ಬಿಹಾರದ ಮುಖ್ಯಮಂತ್ರಿ ನಿತೀಶ್‌ಕುಮಾರ್, ಬಿಜೆಪಿ ಆಳ್ವಿಕೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಬಿಜೆಪಿಯ ಎಲ್ಲ ರಾಜ್ಯಗಳ ಅಧ್ಯಕ್ಷರುಗಳು ನೂತನ ಸಂಸತ್ ಸದಸ್ಯರಿಗೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನ ನೀಡಲಾಗಿದೆ.
ವಿದೇಶಿ ಗಣ್ಯರ ದಂಡು
ಪ್ರಧಾನಿಯಾಗಿ ನರೇಂದ್ರಮೋದಿ ಅವರ ಪ್ರಮಾಣವಚನ ಸಮಾರಂಭದಲ್ಲಿ ಹಲವು ದೇಶಗಳ ಅಧ್ಯಕ್ಷರು ಪ್ರಧಾನಿಗಳು ಪಾಲ್ಗೊಳ್ಳಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ’ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ ಟೋಬ್ಗೇ ಈಗಾಗಲೇ ದೆಹಲಿಗೆ ಆಗಮಿಸಿದ್ದಾರೆ. ಇನ್ನೂ ಹಲವು ದೇಶಗಳ ನಾಯಕರುಗಳು ಈ ಸಮಾರಂಭದಲ್ಲಿ ಭಾಗಿಯಾಗುವರು.
ಮಠಾಧೀಶರು, ಸಾಧು-ಸಂತರಿಗೂ ಆಹ್ವಾನ
ಪ್ರಧಾನಿಯವರ ಪ್ರಮಾಣವಚನ ಕಾರ್ಯಕ್ರಮಕ್ಕೆ ದೇಶದ ಪ್ರಮುಖ ಸ್ವಾಮೀಜುಗಳು ಸಾಧು-ಸಂತರಿಗೂ ಆಹ್ವಾನ ನೀಡಲಾಗಿದ್ದು, ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಗೂ ಆಹ್ವಾನ ಬಂದಿದ್ದು, ಅವರು ದೆಹಲಿಗೆ ತೆರಳಿದ್ದಾರೆ.