ಸಿದ್ದು ಸರ್ಕಾರ ಅಸ್ಥಿರಕ್ಕೆ ಬಿಜೆಪಿ ಯತ್ನ
ನವದೆಹಲಿ,ಸೆ.೨೫:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮೋಸದ ಮಾರ್ಗ ಅನುಸರಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್‌ಸಿಬಲ್ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿ ವಜಾ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಸಕರಿಗೆ ಆಮಿಷ ಒಡ್ಡುವುದು ೧೦ನೇ ಅನುಸೂಚಿಯ ದುರುಪಯೋಗ, ಇಡಿ-ಸಿಬಿಐ ದಾಳಿಯಿಂದ ಭಯ ಸೃಷ್ಟಿಸುವುದು, ಸಾಂವಿಧಾನಿಕ ಜವಾಬ್ದಾರಿಯನ್ನು ಮೀರಿ ರಾಜ್ಯಪಾಲರು ವರ್ತಿಸಿರುವುದನ್ನು ಅವರು ಪಟ್ಟಿ ಮಾಡಿದ್ದಾರೆ.
ಬಿಜೆಪಿಯ ಪಾಲಿಗೆ ಸಂವಿಧಾನ ಪವಿತ್ರ ಗೀತೆಗಿಂತಲೂ ಮಿಗಿಲಾದದ್ದು ಎಂದು ಅವರು ವ್ಯಂಗ್ಯವಾಡಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್ ನಿನ್ನೆ ವಜಾಗೊಳಿಸಿದ್ದ ಹಿನ್ನೆಲೆಯಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ.