ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ’ ಚಳವಳಿ1 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಕರವೇ ಧರಣಿ
ಬೀದರ್: ಜೂ.29:’ಕರ್ನಾಟಕದಲ್ಲಿ ಕನ್ನಡಿಗರಿಗೇ ಉದ್ಯೋಗ’ ಚಳವಳಿ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕವು ಜುಲೈ 1 ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಿದೆ.
ಅಂದು ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ಧರಣಿ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ್ ತಿಳಿಸಿದ್ದಾರೆ.
ಕರ್ನಾಟಕದ ಎಲ್ಲ ಬಗೆಯ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಸಿಂಹಪಾಲು ಇರಬೇಕು ಎನ್ನುವುದು ಕನ್ನಡಿಗರ ಬೇಡಿಕೆಯಾಗಿದೆ. ಖಾಸಗಿ ವಲಯ ದೊಡ್ಡದಾಗಿ ಬೆಳೆದ ಕಾರಣ ಡಾ. ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಯಾಗಿಲ್ಲ. ಹೊರ ರಾಜ್ಯದವರು ಕನ್ನಡಿಗರ ಉದ್ಯೋಗ ಕಿತ್ತುಕೊಳ್ಳುತ್ತಿದ್ದು, ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿಗಾಗಿ ವೇದಿಕೆಯ ರಾಜ್ಯ ಅಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ ಎರಡು ದಶಕದಿಂದ ಹೋರಾಟ ನಡೆಸುತ್ತ ಬರಲಾಗುತ್ತಿದೆ. ಇದೀಗ ಅದಕ್ಕಾಗಿ ಚಳವಳಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಅನ್ವಯ ರಾಜ್ಯ ಸರ್ಕಾರ ಬಲಿಷ್ಠ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆಯ ಶೇ 100 ರಷ್ಟು ಹುದ್ದೆ, ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಶೇ 100 ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಬೇಕು. ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ 100 ರಷ್ಟು ಮೀಸಲು ಒದಗಿಸಬೇಕು ಎಂಬಿತ್ಯಾದಿಗಳು ವೇದಿಕೆಯ ಬೇಡಿಕೆಗಳಾಗಿವೆ ಎಂದು ಹೇಳಿದ್ದಾರೆ.
ಜಿಲ್ಲೆಯ ವೇದಿಕೆಯ ಕಾರ್ಯಕರ್ತರು, ನಿರುದ್ಯೋಗಿಗಳು ಹಾಗೂ ಕನ್ನಡಿಗರು ಧರಣಿ ಸತ್ಯಾಗ್ರಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.