ಅಭಿವೃದ್ಧಿಯಲ್ಲಿ ಅಂಕಿ-ಅಂಶಗಳ ಪಾತ್ರ ಪ್ರಮುಖ
ಕಲಬುರಗಿ: ಜೂ.29:ರಾಷ್ಟ್ರದ ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ನಿಖರವಾದ ಮಾಹಿತಿಯನ್ನು ನೀಡುವ ಮೂಲಕ ಅವುಗಳಿಗೆ ಪರಿಹಾರವನ್ನು ದೊರಕಿಸಿಕೊಡುವಲ್ಲಿ ಅಂಕಿ-ಅಂಶಗಳು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತವೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಮತಪಟ್ಟರು.
ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರೌಢಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶನಿವಾರ ಜರುಗಿದ ಪ್ರಸಿದ್ದ ಸಂಖ್ಯಾಶಾಸ್ತ್ರಜ್ಞ ಪ್ರೊ.ಪಿ.ಸಿ.ಮಹಲ್‍ನೋಬಿಸ್‍ರ ಜನ್ಮದಿನವಾದ ‘ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮಹಲ್‍ನೊಬಿಸ್ ಅವರು ಸಂಖ್ಯಾಶಾಸ್ತ್ರ ಕ್ಷೇತ್ರಕ್ಕೆ ತಮ್ಮದೇ ಆದ ಅದ್ವಿತೀಯ ಕೊಡುಗೆಯನ್ನು ನೀಡಿದ್ದಾರೆ. ಗಣಿತಶಾಸ್ತ್ರ, ವಿಜ್ಞಾನಕ್ಷೇತ್ರಕ್ಕೂ ಸಾಕಷ್ಟು ಸೇವೆಯನ್ನು ನೀಡಿದ್ದಾರೆ. ದ್ವಿತೀಯ ಪಂಚವಾರ್ಷಿಕ ಯೋಜನೆಗೆ ಸೂಕ್ತ ಮಾರ್ಗದರ್ಶನ ನೀಡಿ ಯಶಸ್ವಿಗೊಳಿಸಿದ್ದಾರೆ. ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆಯನ್ನು ಸ್ಥಾಪಿಸಿ, ಅದರ ಮೂಲಕ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕೃಷಿ, ಕೈಗಾರಿಕೆ, ಸೇವಾ ಕ್ಷೇತ್ರ ಸಂಬಂಧಿಸಿದಂತೆ ಅನೇಕ ಅಂಕಿ-ಅಂಶಗಳನ್ನು ಸಂಗ್ರಹಿಸಿ ಆರ್ಥಿಕ ಸಮಸ್ಯೆಗೆ ಪರಿಹಾರವನ್ನು ಸೂಚಿಸಿದ್ದಾರೆ. ಸಂಖ್ಯಾಶಾಸ್ತ್ರವು ರಾಷ್ಟ್ರದ ಸಂಪನ್ಮೂಲಗಳ ಸದ್ಬಳಕೆಯ ಬಗ್ಗೆ ವಿವರಣೆ ನೀಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದ ಅಧ್ಯಕ್ಷ ಅಸ್ಲಾಂ ಶೇಖ್, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ, ಶಿಕ್ಷಕರಾದ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ, ಶಿಕ್ಷಕರಾದ ಪೂರ್ಣಿಮಾ ಪಾಟೀಲ, ಕಾಶಮ್ಮ ಚಿನಮಳ್ಳಿ, ಪ್ರೀಯಾಂಕಾ ಪಿ.ಕೆ., ಶಿಲ್ಪಾ, ರೋಹಿತ್, ವರ್ಷಾರಾಣಿ, ಖಮರುನ್ನೀಸ್, ಚಂದ್ರಲೇಖಾ, ಸರಸ್ವತಿ, ಪ್ರೀತಿ ಜೆ.ಬಿ., ಮಲ್ಲಮ್ಮ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.