ಮಕ್ಕಳನ್ನು ಶಿಸ್ತುಬದ್ಧವಾಗಿ ರೂಪಿಸುವ ಗುರಿ
ಸಂಜೆವಾಣಿ ನ್ಯೂಸ್
ಮೈಸೂರು: ಜೂ.29:- ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ 20 ಲಕ್ಷ ವಿದ್ಯಾರ್ಥಿಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ವ್ಯಾಪ್ತಿಗೆ ತಂದು ಅವರನ್ನು ಶಿಸ್ತುಬದ್ಧ ಮಕ್ಕಳನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಗರದ ಸಂಸ್ಥೆಯ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲೆಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಮಾಹಿತಿ ಶಿಬಿರದಲ್ಲಿ ಮಾತನಾಡಿ, ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ 1 ಕೋಟಿ ವಿದ್ಯಾರ್ಥಿಗಳು ಇದ್ದು, ಪ್ರಸ್ತುತ 6.50 ಲಕ್ಷ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಇದರ ಜತೆಗೆ ಪ್ರಪಂಚದ ಹಾಗುಹೋಗುಗಳನ್ನು ತಿಳಿದುಕೊಳ್ಳಬೇಕು. ಸಮಾಜವನ್ನು ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕು. ಅವರಲ್ಲಿ ಮಾನವೀಯ ಮೌಲ್ಯಗಳು ಹೆಚ್ಚಾಗಬೇಕು. ಈ ಎಲ್ಲ ಗುಣಗಳು ಮಕ್ಕಳಲ್ಲಿ ಬೆಳೆಯಲು ಸ್ಕೌಟ್ಸ್ ಮತ್ತು ಗೈಡ್ಸ್‍ನ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಸ್.ಟಿ.ಜವರೇಗೌಡ ಮಾತನಾಡಿ, ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಹೆಚ್ಚಿಸಲು ಸ್ಕೌಟ್ಸ್ ಮತ್ತು ಗೈಡ್ಸ್‍ನ ಅವಶ್ಯಕತೆ ಇದೆ. ಹೀಗಾಗಿ ಪ್ರತಿ ಶಾಲೆಯಲ್ಲೂ ಕನಿಷ್ಠ 5 ಸ್ಕೌಟ್ಸ್ ಮತ್ತು ಗೈಡ್ಸ್ ತಂಡವನ್ನು ರಚಿಸಬೇಕು ದೈಹಿಕ ಶಿಕ್ಷಕರು ಇರುವ ಶಾಲೆಯಲ್ಲಿ ಕಡ್ಡಾಯವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ತಂಡ ರಚನೆಯಾಗಲೇ ಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಜಂಟಿ ನಿರ್ದೇಶಕ ಬಿ.ಕೆ.ಬಸವರಾಜು, ಜಿಲ್ಲಾ ಮುಖ್ಯ ಆಯುಕ್ತ ಪಿ.ವಿಶ್ವನಾಥ್ ಹಾಗೂ ಇತರರು ಇದ್ದರು.