ಕ್ರೀಡಾಂಗಣ ಕಾಮಗಾರಿ ಕಳಪೆ-ಅಸಮಾಧಾನ
ಕೋಲಾರ,ಜೂ.೨೯- ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿಂಥೆಟಿಕ್ ಕಾಮಗಾರಿಗಳು ಕಳಪೆಯಿಂದ ಕೂಡಿದೆ ಎಂದು ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ರಾಜ್ಯ ಕಾರ್ಯದರ್ಶಿ ರಾಜವೇಲು ಅಸಮಾಧಾನ ವ್ಯಕ್ತಪಡಿಸಿದರು.
ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿ, ಪರಿಶೀಲಿಸಿದರು.
ಕ್ರೀಡಾಂಗಣ ನಿರ್ಮಾಣಕ್ಕೆ ಅಂದಾಜು ೭ ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಮಂಜೂರಾಗಿದ್ದು ,ಅಲ್ಲಿನ ಸ್ಥಿತಿಗತಿಗಳನ್ನು ತಿಳಿಯುವ ಸಲುವಾಗಿ ಕೆ.ಎ.ಎ.ರಾಜ್ಯ ಕಾರ್ಯದರ್ಶಿ ಹಾಗೂ ಕೋಲಾರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ೨೦೨೩ ರ ಗಣ ರಾಜ್ಯೋತ್ಸವದಂದು ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿದ್ದು ,ಒಂದೂವರೆ ವರ್ಷವಾದರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯವರು ಕ್ರೀಡಾಂಗಣದ ಕಾಮಗಾರಿಗಳ ಕಡೆ ಗಮನ ಹರಿಸಿ, ತಪ್ಪುಗಳಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಾವುಗಳು ಕಂಟ್ರಾಕ್ಟರ್ ಮೇಲೆ ಒತ್ತಡ ಹಾಕಬೇಕೆಂದು ಒತ್ತಾಯಿಸಿದರು.
ಕ್ರೀಡಾಂಗಣದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸದೆ ತರಾತುರಿಯಲ್ಲಿ ಉದ್ಘಾಟನೆ ಮಾಡಿದರೆ, ಪ್ರತಿಭಟನೆ ಮಾಡುವುದಾಗಿ ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಎನ್.ಮುನಿಯಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಆರ್.ರಾಘವೇಂದ್ರ, ಹಿರಿಯ ಕ್ರೀಡಾಪಟು ಹೆಚ್.ಜಗನ್ನಾಥನ್, ಉಪಾಧ್ಯಕ್ಷ ಗೌಸ್ ಖಾನ್, ಕಾರ್ಯದರ್ಶಿ ರಾಜೇಶ್ ಬಾಬು, ಸದಸ್ಯ ನಾಗೇಶ್, ಜಿಲ್ಲಾ ಕೋಚ್ ಎಂ.ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.