ಪೌರ ಕಾರ್ಮಿಕರಿಗೆ ಸೂಕ್ತ ರಕ್ಷಣಾ ಕವಚ ಒದಗಿಸಿ: ಜಿಲ್ಲಾಧಿಕಾರಿ ಟಿ. ಭೂಬಾಲನ್
ವಿಜಯಪುರ, ಸೆ.26: ಜಿಲ್ಲೆಯ ಎಲ್ಲ ಪೌರ ಕಾರ್ಮಿಕರಿಗೆ ವಸತಿ, ಆರೋಗ್ಯ ಹಾಗೂ ಸುರಕ್ಷಾ ಕವಚಗಳನ್ನು ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ-2013ರನ್ವಯ ಜಿಲ್ಲಾ ಮಟ್ಟದ 3ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೌರ ಕಾರ್ಮಿಕರಿಗೆ ನೇಮಕಾತಿ ಸಂದರ್ಭದಲ್ಲಿ ಬೇಕಾದ ಪ್ರಮಾಣ ಪತ್ರ ನೀಡಿಕೆ ವಿಳಂಬ ಆಗುತ್ತಿದ್ದು, ಆದಷ್ಟು ಶೀಘ್ರವಾಗಿ ಪರಿಶೀಲನೆ ಮಾಡಿ ಪೌರ ಕಾರ್ಮಿಕರಿಗೆ ಅನುಕೂಲ ಮಾಡಿಕೊಡಬೇಕು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಹೊರಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ಇ.ಪಿ.ಎಫ್ ಇ.ಎಸ್.ಐ ಕಟಾವು ಕುರಿತು ನಿಯಮಿತವಾಗಿ ಪರಿಶೀಲಿಸಬೇಕು, ಪ್ರತಿ ಮೂರು ತಿಂಗಳಿಗೊಮ್ಮೆ ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ತಜ್ಞ ವೈದ್ಯರಿಂದ ನಡೆಸಬೇಕು. ಎಲ್ಲ ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ಸಮರ್ಪಕವಾಗಿ ಒದಗಿಸಬೇಕು. ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹಗಳನ್ನು ಸ್ಥಾಪಿಸಿ ಅಲ್ಲಿ ಅವರಿಗೆ ಎಲ್ಲ ಮೂಲಭೂತ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
ಜಿಲ್ಲೆಯ ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರು, ಮುಖ್ಯ ಅಡುಗೆದಾರರು,ಅಡುಗೆ ಸಹಾಯಕರು, ವಾರ್ಡನ್‍ಗಳು ಹಾಗೂ ಇತರರು ಸೇರಿದಂತೆ ಹೊರಗುತ್ತಿಗೆ ಆಧಾರ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆÉ ಆರೋಗ್ಯ ವಿಮಾ ಯೋಜನೆ ಸೌಲಭ್ಯ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಅನುದಾನವನ್ನು ಲ್ಯಾಪ್ಸ್ ಆಗದಂತೆ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ 2024-25ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಆಗಸ್ಟ್-2024ರ ತಿಂಗಳ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆಯಾಗಿದ್ದು ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸುವಂತೆ ಸೂಚಿಸಿದರು. ಬಾಕಿ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ನಗರಾಭಿವೃದ್ಧಿ ಕೋಸದ ಯೋಜನಾ ನಿರ್ದೇಶಕÀ ಬದ್ರುದ್ದೀನ ಸೌದಾಗರ, ಪುರಸಭೆಯ ಮುಖ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.