15 ಅಂಶಗಳ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ
ವಿಜಯಪುರ, ಸೆ.26: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿ ಸಮರ್ಪಕವಾಗಿ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಕುರಿತಾಗಿ ನಡೆದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ವರ್ಷ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಾಮ ನಿರ್ದೇಶಿತ ಸಮಿತಿ ಸದಸ್ಯÀ ರಫಿ ಭಂಡಾರಿ ಮಾತನಾಡಿ, ಕಳೆದ ವರ್ಷ ದೌಲತ್‍ಕೋಟೆಯಲ್ಲಿರುವ ಹಾನಿಗೊಳಗಾದ ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಶಿಕ್ಷಕರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ಕರೆದು ನಿರ್ದೇಶನ ನೀಡಬೇಕು.
ಇನ್ನೋರ್ವ ಸದಸ್ಯ ಅಲ್ಲಾಭಕ್ಷ ಬಿಜಾಪುರ ಮಾತನಾಡಿ, ಅಂಗನವಾಡಿ ಮಕ್ಕಳಿಗೆ ದ್ವಿದಳ ಧಾನ್ಯ ಪೌಷ್ಟಿಕಾಂಶವಿರುವ ಆಹಾರ ನೀಡಬೇಕು. ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಶಿಕ್ಷಕರ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಸಭೆಗೆ ಕೋರಿದರು.
ಈ ಸಭೆಯಲ್ಲಿ ನೀಡಿರುವ ಸಲಹೆ ಸೂಚನೆಗಳನ್ನು ಕಾರ್ಯರೂಪಕ್ಕೆ ತರುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಶಿಕ್ಷಣ ಇಲಾಖೆಯ ಮೈನುದ್ದೀನ ಬನಹಟ್ಟಿ, ರೇಷ್ಮೆ ಇಲಾಖೆಯ ಎಸ್. ಸಿದ್ದರಾಜು, ಪೊಲೀಸ್ ಇಲಾಖೆಯ ರಾಜೇಂದ್ರ ಕೂಸುರ, ನಾಮ ನಿರ್ದೇಶಿತ ಸದಸ್ಯ ಜಂಬುಕುಮಾರ ಬಾಗೇವಾಡಿ ಮತ್ತಿತರರು ಉಪಸ್ಥಿತರಿದ್ದರು.