ವಾರದೊಳಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ನೀಡಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೨೮; ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ತಾಲ್ಲೂಕುವಾರು ಸಂಗ್ರಹಿಸಿ ವಾರದೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ 2024ನೇ ಸಾಲಿನ ಎರಡನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯವಿವಾಹ, ಬಾಲ ಕಾರ್ಮಿಕರಾಗುವ ಸಾಧ್ಯತೆ ಇರುವುದರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ವಿವಿಧ ಕಾರ್ಯತಂತ್ರದ ಮೂಲಕ ಮುಖ್ಯವಾಹಿನಿಗೆ ತರಬೇಕು. ಮಕ್ಕಳು ಶಾಲೆಯಿಂದ ಹೊರಗುಳಿಯಲು ಕಾರಣವೇನು ಎಂಬಿತ್ಯಾದಿ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ವೆಂಕಟೇಶ್ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕ್ರಮವಹಿಸಲಾಗಿದ್ದು, ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 489 ಮಕ್ಕಳಲ್ಲಿ 27 ಮಕ್ಕಳು ಪ್ರವೇಶಾತಿ ಪಡೆಯುವುದು ಬಾಕಿ ಇದೆ ಎಂದರು.