ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತ : ನಿವಾಸಿಗಳಿಂದ ಪ್ರತಿಭಟನೆ
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಜೂ. 28: ಶಿವಮೊಗ್ಗ ನಗರದ ಹೊರವಲಯ ಸೂಳೈಬೈಲು ಬಡಾವಣೆ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಮಾಯಕರು ಸಾವು – ನೋವಿಗೆ ತುತ್ತಾಗುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.ಈ ಸಂಬಂಧ ಗುರುವಾರ ಬಡಾವಣೆಯ ವೃತ್ತದಲ್ಲಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಅಪಘಾತಗಳ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ಸಂಬಂಧಿಸಿದ ಇಲಾಖೆಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕಾಗಮಿಸಿದ ರಾಷ್ಟ್ರೀಯ ಹೆದ್ಧಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಅರ್ಪಿಸಿದರು.ಪ್ರತಿನಿತ್ಯ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತವೆ. ಜೊತೆಗೆ ಅಪಘಾತಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳ ನಿಯಂತ್ರಣ ಉದ್ಧೇಶದಿಂದ ವೈಜ್ಞಾನಿಕ ರೀತಿಯಲ್ಲಿ ಹಂಪ್ಸ್ ಅಳವಡಿಸಬೇಕು. ರಸ್ತೆಯ ಇಕ್ಕೆಲಗಳಲ್ಲಿ ಬೀದಿ ದೀಪಗಳ ವ್ಯವಸ್ಥೆ ಮಾಡುವುದು ಸೇರಿದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.ಪ್ರತಿಭಟನೆಯಲ್ಲಿ ಅಬ್ದುಲ್ ರಹೀಂ, ಸನಾವುಲ್ಲಾ, ಇಮ್ರಾನ್, ನ್ಯಾಮತ್, ಮುಜ್ಜು, ಸಲೀಂ, ನವಾಜ್, ಯಾಸೀನ್ ಸೇರಿದಂತೆ ಮೊದಲಾದವರಿದ್ದರು.