ಜೂ.೩೦ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ
ಬೆಂಗಳೂರು, ಜೂ. ೨೬- ನಗರದ ಶಿವಾನಂದ ವೃತ್ತದ ಬಳಿ ನಿರ್ಮಿಸಿರುವ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂನ್ ೩೦ ರಂದು ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಹಳ ಜನರ ಶ್ರಮದಿಂದ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿದೆ. ಅಂದಿನ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯ ಅಥಿತಿಗಳಾಗಿ ಆಗಮಿಸಲಿದ್ದಾರೆ. ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಫಿಲಂ ಫೆಡರೇಷನ್ ಆಫ್ ಇಂಡಿಯಾ ಪದಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಹೊಂಬಾಳೆ ಫಿಲಂಸ್, ಆರ್.ಎಸ್. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಅಂತಲೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣದ ಸಮಿತಿಯ ಅಧ್ಯಕ್ಷ ಸಾ.ರಾ ಗೋವಿಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ಎಂ.ಜಿ. ರಾಮಮೂರ್ತಿ, ರಮೇಶ್ ಯಾದವ್, ಆರ್.ಎಸ್. ಗೌಡ ಮುಂತಾದವರು ಭಾಗವಹಿಸಿದ್ದರು.