ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜೂ.೨೨; ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ ಶೇ.75ಕ್ಕಿಂತಲೂ ಹೆಚ್ಚು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ  ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತ ನಾಡಿದರು. ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪಹಣಿ ಆಧಾರ್ ಜೋಡಣೆ ಹಾಲಿ ಶೇ.48ರಷ್ಟು ಪ್ರಗತಿ ಸಾಧಿಸಲಾಗಿದ್ದು, ತಿಂಗಳಾಂತ್ಯದೊಳಗೆ ಶೇ.75ಕ್ಕಿಂತಲೂ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸೂಚಿಸಿದ ಅವರು, ಈ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಅಗತ್ಯ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.ಸರ್ಕಾರಿ ಆಸ್ತಿ ಸಂಗ್ರಹಿಸಲು ಡಿಜಿಟಲ್ ಪೆನ್ಸಿಂಗ್ ಪೂರೈಸಲು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಭೂಮಿ ರ್ಯಾಂಕಿಂಗ್‍ನಲ್ಲಿ ಉತ್ತಮ ಪ್ರಗತಿ ಸಾಧಿಸಬೇಕು. ಹಕ್ಕು ಬದಲಾವಣೆ ಪ್ರಕರಣಗಳನ್ನು ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಹೇಳಿದರು.