ಉನ್ನತ ಶಿಕ್ಷಣದ ಮೂಲಕ ಜೀವನದಲ್ಲಿ ಯಶಸ್ಸು ಕಾಣಲು ಕರೆ
ವಿಜಯಪುರ,ಜೂ.22:ಶೈಕಣಿಕ ಕ್ರಾಂತಿಗೆ ವಿಶ್ವವಿದ್ಯಾನಿಲಯಗಳ ಪಾತ್ರ ಪ್ರಮುಖವಾಗಿದ್ದು, ಪತ್ರಿಯೊಬ್ಬರು ಉನ್ನತ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ’21ನೇ ಸಂಸ್ಥಾಪನಾ’ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಜೀವನದಲ್ಲಿ ಶಿಕ್ಷಣ ವ್ಯವಸ್ಥೆ ಅತೀ ಮುಖ್ಯವಾದ ಭಾಗ. ಕಾಲಕ್ಕೆ ತಕ್ಕಂತೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಆಗುತ್ತಿರುವ ಬದಲಾವಣೆಗಳು ಅಭಿವೃದ್ಧಿ ಪಥದತ್ತ ಸಾಗುತ್ತಿದ್ದು ಇಡೀ ವಿಶ್ವದ ಗಮನ ಸೆಳೆಯುತ್ತಿರುವುದು ಹೆಮ್ಮಯ ವಿಚಾರ. ನಮ್ಮ ರಾಷ್ಟ್ರದಲ್ಲಿ ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಬಂದು ಉನ್ನತ ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳು ಹೊಸ-ಹೊಸ ಆವಿಷ್ಕಾರಗಳು ಕೂಡ ಇದಕ್ಕೆ ಕಾರಣ ಎಂದರು.
ಇಂದಿನ ಯುವ ಪೀಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿಯಬೇಕಿದೆ. ಅಂಕಗಳಿಗಾಗಿ ಮಾತ್ರ ಶಿಕ್ಷಣ ಸೀಮಿತವಾಗಿರದೇ ನಿಮ್ಮದೇ ಆದ ಕೌಶಲ್ಯಗಳನ್ನು ಬೆಳೆಸಿಕೊಂಡು ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ. ತುಳಸಿಮಾಲ ಮಾತನಾಡಿ, ಮಹಿಳೆಯರ ಅಭಿವೃದ್ದಿಯಲ್ಲಿ ಸಮಾಜದ ಬದಲಾವಣೆಗಳು ಕೂಡ ಅವಶ್ಯ. ಮಹಿಳಾ ಶಿಕ್ಷಣದಲ್ಲಿ ಅಭಿವೃದ್ಧಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅದನ್ನು ಮುಂದಿನ ದಿನಗಳಲ್ಲಿ ಹೇಗೆ ಮುನ್ನಡೆಸಬೇಕು ಎಂಬುದು ಸವಾಲಾಗಿದೆ. ಅಸಮೀತೆಯನ್ನು ಮುನ್ನಡೆಯಾಗಿ ಇಟ್ಟುಕೊಂಡು ನಮ್ಮ ಕೆಲಸದಲ್ಲಿ ಶ್ರದ್ಧೆ, ಬದ್ಧತೆಯನ್ನು ನಾವು ಕಾಣಬೇಕಾಗುತ್ತದೆ. ಮತ್ತು ಹೊಸ ರೀತಿಯ ಸಾಮಥ್ರ್ಯಗಳನ್ನು ನಾವು ಬೆಳಸಿಕೊಂಡು ಮುನ್ನಡೆಯಬೇಕು ಎಂದರು.
ಸಾಕಷ್ಟು ವಿಶ್ವವಿದ್ಯಾನಿಲಯಗಳ ಜೊತೆ ಪೈಪೋಟಿ ನೀಡಬೇಕಾದರೆ ಗುಣಮಟ್ಟದ ಶಿಕ್ಷಣ ಅವಶ್ಯಕ. ಮತ್ತು ವಿದ್ಯಾರ್ಥಿಗಳ ಔಚಿತ್ಯಪೂರ್ಣ ಶಿಕ್ಷಣ ನೀಡುವ ಜವಾಬ್ದಾರಿ ವಿಶ್ವವಿದ್ಯಾನಿಲಯದ್ದಾಗಿರುತ್ತದೆ. ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮ ಶಿಕ್ಷಣ ಮುಂದುವರಿಸಿಕೊಂಡು ವಿದ್ಯಾರ್ಥಿಗಳ ಅರ್ಹತೆಗೆ ಅನುಗುಣವಾಗಿ ಶಿಕ್ಷಣ ನೀಡುವುದು ವಿಶ್ವವಿದ್ಯಾನಿಲಯಗಳ ಜವಾಬ್ದಾರಿಗಳಾಗಿವೆ. ಹಾಗೂ ಹೊಸ ರೀತಿಯ ಆವಿಷ್ಕಾರಗಳಿಗೆ ಅವಕಾಶಗಳನ್ನು ಕಲ್ಪಿಸಿಕೊಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಸಹಕಾರಿ ಯಾಗುವ ನಿಟ್ಟಿನಲ್ಲಿ ಕೆಲಸಮಾಡಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ತಾವು ಸಾಗುವ ದಾರಿಯನ್ನು ಸ್ಮರಿಸಿಕೊಳ್ಳುತ್ತಾ ಸುಸ್ಥಿರ ಸಮಾಜ ಕಟ್ಟುವಲ್ಲಿ ಭಾಗಿಯಾಗಿ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿವಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಮಹಿಳಾ ವಿವಿಯ ಐ.ಕ್ಯೂ.ಎ.ಸಿ ಕೋಶದ ಉಪ ನಿರ್ದೇಶಕಿ ಪ್ರೊ.ರೇಣುಕಾ ಮೇಟಿ ಅವರು ಸನ್ಮಾನ ಕಾರ್ಯಕ್ರಮವನ್ನು ನೇರವೇರಿಸಿದರು.
ವಿವಿಯ ವಿವಿಧ ವಿಭಾಗಳ ಮುಖ್ಯಸ್ಥರು, ಡೀನರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆಯನ್ನು ಹಾಡಿದರು. ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಚಂದ್ರಶೇಖರ ಎಚ್.ಎಮ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಶೋಧನಾ ವಿದ್ಯಾರ್ಥಿನಿ ಶಾದಿಕಾ ನವಾಜಿ ಅತಿಥಿ ಪರಿಚಯವನ್ನು ಮಾಡಿದರು. ಶಿಕ್ಷಣ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯರಾದ ಕಾವ್ಯಾ ಬಡಿಗೇರ ನಿರೂಪಿಸಿದರು. ಹೂವಕ್ಕ ದೆನಕರ ವಂದಿಸಿದರು.