ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರುದ್ಧ ರಸ್ತೆ ತಡೆ
ಗುಬ್ಬಿ, ಜೂ. ೨೨- ಪಟ್ಟಣದ ಬಸ್ ನಿಲ್ದಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಬಿಜೆಪಿ ತಾಲ್ಲೂಕು ಅಧ್ಯಕ್ಷ ಪಂಚಾಕ್ಷರಯ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಹಾಕುವ ಕೆಲಸ ಮಾಡುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಮಧ್ಯಮ ವರ್ಗದ ಜನರಿಗೆ ಕೂಲಿ ಕಾರ್ಮಿಕರಿಗೆ, ಕೃಷಿಕರಿಗೆ, ಆಟೋ ಚಾಲಕರಿಗೆ, ಕ್ಯಾಬ್ ಚಾಲಕರ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬೆಲೆ ಏರಿಕೆ ನೀತಿಯನ್ನು ಹಿಂಪಡೆಯದೆ ಹೋದರೆ ಜನ ವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ನಿರಂತರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮಾಜಿ ಜಿ.ಪಂ. ಸದಸ್ಯ ಚಂದ್ರಶೇಖರ್ ಬಾಬು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಚ್.ಡಿ. ಭೈರಪ್ಪ, ಬಿಜೆಪಿ ಮುಖಂಡ ಸಾಗರನಹಳ್ಳಿ ವಿಜಯಕುಮಾರ್, ಎನ್.ಸಿ. ಪ್ರಕಾಶ್, ಹಿತೇಶ್, ಮಾಜಿ ಪ.ಪಂ. ಅಧ್ಯಕ್ಷ ಅಣ್ಣಪ್ಪಸ್ವಾಮಿ, ಮುಖಂಡರಾದ ಸಾಗರನಳ್ಳಿ ನಂಜೇಗೌಡ, ಅ.ನ. ಲಿಂಗಪ್ಪ, ಯತೀಶ್, ಎ.ಕೆ.ಪಿ. ರಾಜು ಮತ್ತಿತರರು ಪಾಲ್ಗೊಂಡಿದ್ದರು.