ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಸಿರಾ, ಜೂ. ೨೨- ರಾಜ್ಯ ಸರ್ಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರ ಬದುಕನ್ನು ದುಸ್ತರಗೊಳಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಈಗ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಕಾಂಗ್ರೆಸ್ ನಿತ್ಯ ಬೆಲೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ ಎಂದರು.
ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಲೋಕಸಭಾ ಚುನಾವಣೆ ಮುಗಿದ ತಕ್ಷಣ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸುವ ಮೂಲಕ ಜನವಿರೋಧಿ ನಿಲುವು ತೋರಿದೆ. ಸರ್ಕಾರದ ಈ ಕ್ರಮದಿಂದಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದ್ದು, ಬಡಜನತೆ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಆದ್ದರಿಂದ ಸರ್ಕಾರ ತಕ್ಷಣ ಬೆಲೆ ಏರಿಕೆ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಇಲ್ಲಿನ ಪ್ರವಾಸಿ ಮಂದಿರದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ದ್ವಿಚಕ್ರ ವಾಹನಕ್ಕೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ನಗರ ಮಂಡಲ ಅಧ್ಯಕ್ಷ ಗಿರಿಧರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಚಿಕ್ಕಣ್ಣ, ಮಹಿಳಾ ಮೋರ್ಚಾ ಅಧ್ಯಕ್ಷೆ ಲಲಿತಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂಜಲಗೆರೆ ಮೂರ್ತಿ, ಶ್ರೀನಿವಾಸ್, ತರೂರು ಬಸವರಾಜು, ಬುಕ್ಕಾಪಟ್ಟಣ ಮಂಜುನಾಥ್, ರಂಗಸ್ವಾಮಿ, ಕದಿರೇಹಳ್ಳಿ ಮೂರ್ತಿ, ಪದ್ಮ ಮಂಜುನಾಥ್ ಮತ್ತಿತರರು ಭಾಗಿಯಾಗಿದ್ದರು.